ಶನಿವಾರ, 6 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚಿಕ್ಕಬಳ್ಳಾಪುರ: ಜನರ ಹೈರಾಣು ಮಾಡುತ್ತಿದೆ ಡೆಂಗಿ

ಜಿಲ್ಲೆಯಲ್ಲಿ 89 ಮಂದಿಗೆ ಡೆಂಗಿ ಕಾಯಿಲೆ; ಚಿಕ್ಕಬಳ್ಳಾಪುರದಲ್ಲಿ ಗರಿಷ್ಠ ಪ್ರಕರಣ
Published 4 ಜುಲೈ 2024, 6:48 IST
Last Updated 4 ಜುಲೈ 2024, 6:48 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಜನರನ್ನು ಡೆಂಗಿ ಜ್ವರ ತೀವ್ರವಾಗಿಯೇ ಬಾಧಿಸುತ್ತಿದೆ. ಕೆಲವು ಜಿಲ್ಲೆಗಳಲ್ಲಿ ಡೆಂಗಿ ಪೀಡಿತರ ಸಂಖ್ಯೆ ಹೆಚ್ಚುತ್ತಲೇ ಇದೆ. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಡೆಂಗಿ ಪೀಡಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. 2024ರ ಜನವರಿಯಿಂದ ಇಲ್ಲಿಯವರೆಗೆ ಜಿಲ್ಲೆಯಲ್ಲಿ 89 ಮಂದಿಗೆ ರೋಗ ತಗುಲಿದೆ.

ಚಿಕ್ಕಬಳ್ಳಾಪುರ ತಾಲ್ಲೂಕಿನಲ್ಲಿಯೇ ಗರಿಷ್ಠ ಪ್ರಕರಣಗಳು ದಾಖಲಾಗಿವೆ. ಗುಡಿಬಂಡೆ ತಾಲ್ಲೂಕಿನಲ್ಲಿ ಕಡಿಮೆ ಪ್ರಕರಣಗಳು ವರದಿಯಾಗಿವೆ.

ಆರೋಗ್ಯ ಇಲಾಖೆ ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮ ಪಂಚಾಯಿತಿ ಸಹಯೋಗದಲ್ಲಿ ಜಾಗೃತಿ ಮೂಡಿಸುತ್ತಿದೆ. ಪ್ರತಿ ಶುಕ್ರವಾರ ಒಣ ದಿನವನ್ನಾಗಿ ಆಚರಿಸಲಾಗುತ್ತಿದೆ. 

ವಾರಕ್ಕೆ ಒಂದು ದಿನ- ಪ್ರತಿ ಶುಕ್ರವಾರ ಈಡಿಸ್ ಸೊಳ್ಳೆ ಉತ್ಪತ್ತಿ ತಾಣಗಳನ್ನು ನಾಶ ಮಾಡುವ ದಿನವನ್ನಾಗಿ ಆಚರಿಸಲು ಆರೋಗ್ಯ ಇಲಾಖೆ ಸೂಚನೆ ಸಹ ನೀಡಿದೆ. ಈ ಪ್ರಕಾರ ಕಳೆದ ಶುಕ್ರವಾರ ನಗರದ ವಾಪಸಂದ್ರ ವಾರ್ಡ್‌ನಲ್ಲಿ ಸಮುದಾಯದೊಂದಿಗೆ ಸೇರಿ ಡೆಂಗಿ ಜ್ವರವನ್ನು ನಿಯಂತ್ರಿಸೋಣ ಎಂಬ ಘೋಷ ವಾಕ್ಯದೊಂದಿಗೆ ಅರಿವು ಮೂಡಿಸಲಾಯಿತು. ಪ್ರತಿ ಶುಕ್ರವಾರವೂ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಆರೋಗ್ಯ ಇಲಾಖೆ ಮುಂದಾಗಿದೆ. 

ರೋಗದ ಗುಣಲಕ್ಷಣಗಳನ್ನು ನೋಡಿ ರಕ್ತ ಪರೀಕ್ಷೆ ಮಾಡಿಸಲಾಗುತ್ತಿದೆ. ಹೀಗೆ ರಕ್ತ ಪರೀಕ್ಷೆಗೆ ಒಳಪಟ್ಟವರಲ್ಲಿ ಡೆಂಗಿ ರೋಗ ಪತ್ತೆಯಾಗುತ್ತಿದೆ. 

ಸತತವಾಗಿ ಮಳೆ ಬರುತ್ತಿರುವುದರಿಂದ ನೀರಿನ ಮೂಲಗಳಲ್ಲಿ ನೀರು ಸಂಗ್ರಹವಾಗುತ್ತಿದೆ. ಸೊಳ್ಳೆಗಳು ಉತ್ಪತ್ತಿಯಾಗುತ್ತಿವೆ. ಈ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ವಯಂ ಸೇವಾ ಸಂಸ್ಥೆಗಳ ನೆರವಿನೊಂದಿಗೆ ಕಾರ್ಯಕ್ರಮವು ಸಹ ಜಿಲ್ಲೆಯಲ್ಲಿ ಜಾರಿಯಲ್ಲಿವೆ.

ಆರೋಗ್ಯ ಇಲಾಖೆ ಜೊತೆಗೆ ಇತರೆ ಇಲಾಖೆ ಅಧಿಕಾರಿಗಳು ಕೈಜೋಡಿಸಬೇಕು. ರೋಗ ತಡೆಗೆ ವಹಿಸಲಾಗಿರುವ ಕ್ರಮಗಳ ಕುರಿತು ಅನುಪಾಲನ ವರದಿ ಸಲ್ಲಿಸಬೇಕು. ತಾಲ್ಲೂಕು ಮಟ್ಟದಲ್ಲಿ ತಹಶೀಲ್ದಾರ್, ತಾಲ್ಲೂಕು ಪಂಚಾಯಿತಿ ಅಧಿಕಾರಿಗಳು ವ್ಯಾಪಕವಾಗಿ ಭೇಟಿ ನೀಡಿ ಪರಿಶೀಲಿಸಬೇಕು. ಸಭೆಗಳನ್ನು ನಡೆಸಿ ರೋಗ ಪ್ರಕರಣಗಳು ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು ಎಂದು ಇತ್ತೀಚೆಗೆ ಡೆಂಗಿ ಸಂಬಂಧ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ಸೂಚಿಸಿದ್ದಾರೆ.

ಬೆಳಿಗ್ಗೆ ಕಚ್ಚುವ ಸೊಳ್ಳೆ:  ಡೆಂಗಿ ಜ್ವರವು ಈಡೀಸ್ ಈಜಿಪ್ಟೈ ಸೊಳ್ಳೆ ಕಚ್ಚುವಿಕೆಯಿಂದ ಹರಡುತ್ತದೆ. ಈ ಸೊಳ್ಳೆಗಳು ಮನೆಗಳಲ್ಲಿ ಶೇಖರಿಸಿರುವ ನೀರಿನ ತಾಣಗಳಾದ ಡ್ರಮ್, ಬ್ಯಾರಲ್, ಸಿಮೆಂಟ್ ತೊಟ್ಟಿ, ಮಡಿಕೆ ಹಾಗೂ ತ್ಯಾಜ್ಯ ವಸ್ತುಗಳಾದ ತೆಂಗಿನ ಚಿಪ್ಪು, ಒಡೆದ ಬಾಟಲಿ, ಟೈರ್‌ಗಳಲ್ಲಿ ಶೇಖರವಾಗುವ ಶುದ್ಧ ನೀರಿನಲ್ಲಿ ಸಾಮಾನ್ಯವಾಗಿ ಸಂತಾನ ಅಭಿವೃದ್ದಿ ಮಾಡುತ್ತವೆ. ಹಗಲು ಹೊತ್ತಿನಲ್ಲಿ ಮಾತ್ರ ಮನುಷ್ಯರನ್ನು ಕಚ್ಚುತ್ತವೆ.  

ರೋಗಕ್ಕೆ  ತುತ್ತಾದವರಲ್ಲಿ ಇದ್ದಕ್ಕಿದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗದಲ್ಲಿ ತೀವ್ರ ನೋವು, ಮಾಂಸಖಂಡ, ಕೀಲುಗಳಲ್ಲಿ ವಿಪರೀತ ನೋವು, ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಹಾಗೂ ಚರ್ಮದ ಮೇಲೆ ಅಲ್ಲಲ್ಲಿ ರಸ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುತ್ತವೆ.

ಡೆಂಗಿ ಜ್ವರಕ್ಕೆ ಯಾವುದೇ ನಿರ್ದಿಷ್ಟ ಔಷಧಿ ಅಥವಾ ಲಸಿಕೆ ಇಲ್ಲ. ರೋಗದ ಲಕ್ಷಣಗಳಿಗೆ ಅನುಗುಣವಾಗಿ ತಜ್ಞ ವೈದ್ಯರಿಂದ ಸೂಕ್ತ ಚಿಕಿತ್ಸೆ ಪಡೆಯಬಹುದು. ಇಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಸರ್ಕಾರಿ ಆಸ್ಪತ್ರೆ, ಪ್ರಾಥಮಿಕ ಆರೋಗ್ಯ ಕೇಂದ್ರಗಳ  ವೈದ್ಯರಲ್ಲಿ  ಪರಿಕ್ಷಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು.

ತಾಲ್ಲೂಕು; ಡೆಂಗಿ ಪೀಡಿತರು

ಚಿಕ್ಕಬಳ್ಳಾಪುರ;24
ಗೌರಿಬಿದನೂರು;11
ಬಾಗೇಪಲ್ಲಿ;15
ಚಿಂತಾಮಣಿ;14
ಶಿಡ್ಲಘಟ್ಟ;22
ಗುಡಿಬಂಡೆ;3‌
ಒಟ್ಟು;89

ಸೊಳ್ಳೆ ನಿಯಂತ್ರಣವೇ ವಿಧಾನ
ಸೊಳ್ಳೆಗಳ ನಿಯಂತ್ರಣವೇ ಡೆಂಗಿ ಜ್ವರದ ಹತೋಟಿಗೆ ಮುಖ್ಯ ವಿಧಾನ. ಮನೆಗಳಲ್ಲಿ ನೀರನ್ನು ಶೇಖರಿಸಿರುವ ಸಿಮೆಂಟ್ ತೊಟ್ಟಿ ಕಲ್ಲು ಚಪ್ಪಡಿಯಿಂದ ನಿರ್ಮಿಸಿದ ತೊಟ್ಟಿಗಳು ಡ್ರಮ್ ಬ್ಯಾರಲ್ ಮಣ್ಣಿನ ಮಡಿಕೆ ಟೈರ್‌ಗಳು ಮುಂತಾದ ಕಡೆ ಶೇಖರಣೆಯಾಗುವ ನೀರಿನಲ್ಲಿ ಸೊಳ್ಳೆಗಳು ಉತ್ಪತ್ತಿ ಆಗುತ್ತವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ಎಸ್.ಮಹೇಶ್ ಕುಮಾರ್ ತಿಳಿಸಿದ್ದಾರೆ.  ನೀರಿನ ತೊಟ್ಟಿಗಳು ಡ್ರಮ್ ಬ್ಯಾರಲ್ ಗಳು ಏರ್ ಕೂಲರ್ ಇತ್ಯಾದಿಗಳನ್ನು ವಾರಕ್ಕೆ ಒಮ್ಮೆ ತಪ್ಪದೇ ಖಾಲಿ ಮಾಡಿ ಒಣಗಿಸಬೇಕು. ಪುನಃ ನೀರು ಭರ್ತಿ ಮಾಡಿಕೊಳ್ಳಬೇಕು. ನೀರು ಖಾಲಿ ಮಾಡಲು ಸಾಧ್ಯವಿಲ್ಲದಿದ್ದಲ್ಲಿ ಸರಿಯಾದ ಮುಚ್ಚಳದಿಂದ ಮುಚ್ಚಬೇಕು. ಬಯಲಿನಲ್ಲಿರುವ ಘನತ್ಯಾಜ್ಯ ವಸ್ತುಗಳಾದ ಟೈರು. ಎಳನೀರಿನ ಚಿಪ್ಪು ಒಡೆದ ಬಾಟಲಿ ಮುಂತಾದವುಗಳಲ್ಲಿ ಮಳೆ ನೀರು ಸಂಗ್ರಹವಾಗದಂತೆ ಎಚ್ಚರವಹಿಸಬೇಕು. ಸೂಕ್ತ ವಿಲೇವಾರಿ ಮಾಡಬೇಕು. ಸ್ವಯಂ ರಕ್ಷಣಾ ವಿಧಾನಗಳಾದ ಸೊಳ್ಳೆ ನಿರೋಧಕ ಹಾಗೂ ಸೊಳ್ಳೆ ಪರದೆ ಬಳಸಬೇಕು ಎಂದಿದ್ದಾರೆ. ಆರೋಗ್ಯ ಇಲಾಖೆ ಸಿಬ್ಬಂದಿ ಮನೆ ಮನೆಗೆ ಭೇಟಿ ನೀಡಿ ಡೆಂಗಿ ಜ್ವರದಿಂದ ರಕ್ಷಿಸಿಕೊಳ್ಳಲು ಸಲಹೆಗಳನ್ನು ನೀಡುತ್ತಿದ್ದಾರೆ. ಇವುಗಳನ್ನು ಜನರು ಪಾಲಿಸಬೇಕು ಎಂದು ತಿಳಿಸಿದ್ದಾರೆ.
ರಕ್ತದ ಮಾದರಿ ಪರೀಕ್ಷೆ
ಡೆಂಗಿ ಶಂಕೆ ವ್ಯಕ್ತವಾದರೆ ಸ್ಥಳೀಯ ಆರೋಗ್ಯ ಕೇಂದ್ರದವರು ರಕ್ತದ ಮಾದರಿಗಳನ್ನು ಜಿಲ್ಲಾ ಆಸ್ಪತ್ರೆಯ ಪ್ರಯೋಗಾಲಯಕ್ಕೆ ಕಳುಹಿಸುವರು’ ಎಂದು ಜಿಲ್ಲಾ ಡೆಂಗಿ ನಿಯಂತ್ರಣ ಅಧಿಕಾರಿ ಡಾ.ಪ್ರಕಾಶ್ ತಿಳಿಸಿದರು. ಡೆಂಗಿ ಪ್ರಕರಣಗಳು ಹೆಚ್ಚುತ್ತಿವೆ. ಆದ್ದರಿಂದ ಲಾರ್ವ ನಾಶ ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿ ಆಶಾ ಕಾರ್ಯಕರ್ತೆಯರು ಅಂಗನವಾಡಿ ಕಾರ್ಯಕರ್ತೆಯರು ಹೀಗೆ ಎಲ್ಲರೂ ಸೇರಿ ಈ ಬಗ್ಗೆ ಜಾಗೃತಿ ಮೂಡಿಸುತ್ತಿದ್ದಾರೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT