ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಖಾಲಿ ಚೊಂಬು ಹಿಡಿದು ಕಾಂಗ್ರೆಸ್ ಪ್ರತಿಭಟನೆ

ಕೇಂದ್ರ ಬಜೆಟ್‌:ನ ಅನುದಾನದಲ್ಲಿ ರಾಜ್ಯಕ್ಕೆ ತಾರತಮ್ಯ ಆರೋಪ
Published 26 ಜುಲೈ 2024, 14:36 IST
Last Updated 26 ಜುಲೈ 2024, 14:36 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ರಾಜ್ಯಕ್ಕೆ ಯಾವುದೇ ವಿಶೇಷ ಅನುದಾನದ ಕೊಡುಗೆ ನೀಡದೆ ಅನ್ಯಾಯ ಮಾಡಲಾಗಿದೆ ಎಂದು ಆಪಾದಿಸಿ ಕಾಂಗ್ರೆಸ್ ಜಿಲ್ಲಾ ಘಟಕದ ವತಿಯಿಂದ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಹನುಮಂತಪ್ಪ ವೃತ್ತದಲ್ಲಿ ಖಾಲಿ ಚೊಂಬು ಜೊತೆಗೆ ‘ಕರ್ನಾಟಕಕ್ಕೆ ಮೋದಿ ಚೊಂಬು’ ‘ಜೋಷಿ, ಕುಮಾರಣ್ಣ, ಶೋಭಕ್ಕ, ಸೋಮಣ್ಣ ಸಚಿವರಾದ್ರೂ ಕರ್ನಾಟಕಕ್ಕೆ ಏನಿಲ್ಲಾ, ಏನೇನೂ ಇಲ್ಲ’ ಎಂಬ ಫಲಕಗಳನ್ನು ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಗಾಯತ್ರಿ ಶಾಂತೇಗೌಡ ಪ್ರತಿಭಟನೆ ಉದ್ದೇಶಿಸಿ ಮಾತನಾಡಿ, ‘ರಾಜ್ಯದಿಂದ ಆಯ್ಕೆಯಾದ 19 ಬಿಜೆಪಿ ಮತ್ತು ಜೆಡಿಎಸ್ ಸಂಸದರಿದ್ದು, ಐವರು ಕೇಂದ್ರ ಸಚಿವರಾಗಿದ್ದರೂ ಬಜೆಟ್‌ನಲ್ಲಿ ರಾಜ್ಯಕ್ಕೆ ನಿರೀಕ್ಷಿತ ಅನುದಾನ ತರುವಲ್ಲಿ ವಿಫಲರಾಗಿದ್ದಾರೆ. ಕರ್ನಾಟಕ ಪ್ರತಿನಿಧಿಸುವ ರಾಜ್ಯಸಭೆ ಸಂಸದೆ ಹಾಗೂ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್‌ ರಾಜ್ಯಕ್ಕೆ ಯಾವುದೇ ಕೊಡುಗೆ ನೀಡದೆ ಮಲತಾಯಿ ಧೋರಣೆ ಅನುಸರಿಸಿದ್ದಾರೆ. ಹಾಗಾಗಿ ಮುಂದಿನ ಚುನಾವಣೆಯಲ್ಲಿ ರಾಜ್ಯವನ್ನು ತೊರೆದು ಆಂಧ್ರ ಪ್ರದೇಶದಿಂದ ಸ್ಪರ್ಧೆ ಮಾಡಲಿ ಎಂದು ವಾಗ್ದಾಳಿ ನಡೆಸಿದರು.

ಕೇಂದ್ರ ಬಜೆಟ್ ಪೂರ್ವದಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರಾಜ್ಯದ ಸಮಸ್ಯೆಗಳ ಬಗ್ಗೆ ತಿಳಿಸಿದ್ದರು. ಆದರೂ ಭದ್ರಾ ಮೇಲ್ದಂಡೆ, ಮೇಕೆದಾಟು ನೀರಾವರಿ ಯೋಜನೆಗಳಿಗೆ ಅನುದಾನ ಘೋಷಣೆ ಮಾಡಿಲ್ಲ. ಬಡವರು ಮತ್ತು ರೈತ ವಿರೋಧಿ ನೀತಿಯನ್ನು ಬಿಜೆಪಿ ಅನುಸರಿಸುತ್ತಿದೆ ಎಂದು ಕಿಡಿಕಾರಿದರು.

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದಾಗಿ ಅಪಾರ ಹಾನಿಯಾಗಿದೆ. ಸಮಸ್ಯೆಗಳ ಬಗ್ಗೆ ಚರ್ಚಿಸಬೇಕಾದ ವಿಧಾನ ಪ‍ರಿಷತ್ತಿನ ಸದಸ್ಯರಾದ ಸಿ.ಟಿ.ರವಿ, ಎಸ್.ಎಲ್‌.ಭೋಜೇಗೌಡರು ಸದನದಲ್ಲಿ ತಾಳ ಹಾಕಿಕೊಂಡು ಕುಣಿಯುತ್ತಾ ಕಾಲಹರಣ ಮಾಡುತ್ತಿದ್ದಾರೆ ಎಂದು ಟೀಕಿಸಿದರು.

ನೂತನ ಸಂಸದರು ಜನರ ಸಂಕಷ್ಟ ಆಲಿಸಿ ಸ್ಪಂದಿಸಬೇಕು. ಪ್ರಧಾನಿಯಿಂದ ಜಿಲ್ಲೆಗೆ ಹೆಚ್ಚಿನ ಅನುದಾನ ಕೋರಬೇಕು ಎಂದು ಆಗ್ರಹಿಸಿದರು. 

ಪ್ರತಿಭಟನೆಯಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಪಿ.ಅಂಶುಮಂತ್‌, ಕೆಪಿಸಿಸಿ ವಕ್ತಾರ ಎಚ್‌.ಎಚ್.ದೇವರಾಜ್‌, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ, ಡಿ.ಎಲ್‌.ವಿಜಯಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಂಜೇಗೌಡ, ಹಿರೇಮಗಳೂರು ರಾಮಚಂದ್ರ, ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT