ಐದು ಹಾಸ್ಟೆಲ್‌ಗಳಿಗೆ ಪ್ರಸ್ತಾವ
ಕಲಬುರಗಿ ಶೈಕ್ಷಣಿಕ ಹಬ್ ಆಗಿರುವುದರಿಂದ ಉನ್ನತ ಶಿಕ್ಷಣ ಪಡೆಯಲು ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಹಾಗೂ ನೆರೆಯ ಬೀದರ್ ಯಾದಗಿರಿ ಜಿಲ್ಲೆಗಳಿಂದಲೂ ವಿದ್ಯಾರ್ಥಿಗಳು ಇಲ್ಲಿನ ವಿಶ್ವವಿದ್ಯಾಲಯ ಎಂಜಿನಿಯರಿಂಗ್ ವೈದ್ಯಕೀಯ ಸೇರಿದಂತೆ ಇತರ ವೃತ್ತಿಪರ ಕಾಲೇಜುಗಳಲ್ಲಿ ಪ್ರವೇಶ ಪಡೆಯುತ್ತಾರೆ. ಬಹುತೇಕ ಬಡತನದ ಹಿನ್ನೆಲೆಯ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ಹಾಸ್ಟೆಲ್‌ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುತ್ತಾರೆ. ಪ್ರಿಯಾಂಕ್ ಖರ್ಗೆ ಅವರು ಸಮಾಜ ಕಲ್ಯಾಣ ಸಚಿವರಾಗಿದ್ದಾಗ ಹೊಸದಾಗಿ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ಎದುರು ಸುಸಜ್ಜಿತ ಬಾಲಕಿಯರ ಹಾಸ್ಟೆಲ್ ನಿರ್ಮಿಸಲಾಗಿದೆ. ಇತ್ತೀಚೆಗೆ ರಾಜಾಪುರದ ಬಳಿ 1200 ವಿದ್ಯಾರ್ಥಿಗಳ ಸಾಮರ್ಥ್ಯದ ಹಾಸ್ಟೆಲ್ ಆರಂಭಿಸಲಾಗಿದೆ. ಆದರೂ ಬರುವ ಅರ್ಜಿಗಳಿಗೆ ತಕ್ಕಂತೆ ಹಾಸ್ಟೆಲ್‌ನಲ್ಲಿ ಪ್ರವೇಶ ನೀಡಲು ಸಾಧ್ಯವಾಗುತ್ತಿಲ್ಲ. ಈ ಪರಿಸ್ಥಿತಿ ನಿಭಾಯಿಸಲು ಹೊಸದಾಗಿ ತಲಾ 100 ವಿದ್ಯಾರ್ಥಿಗಳ ಸಾಮರ್ಥ್ಯದ ಮೂರು ಬಾಲಕರ ಹಾಸ್ಟೆಲ್ ಹಾಗೂ ಎರಡು ಬಾಲಕಿಯ ಹಾಸ್ಟೆಲ್ ಮಂಜೂರು ಮಾಡುವಂತೆ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಹೆಚ್ಚುವರಿ ನಿರ್ದೇಶಕ ಎಂ.ಎಸ್. ಅಲ್ಲಾಬಕಾಷ್ ‘ಪ್ರಜಾವಾಣಿ’ಗೆ ತಿಳಿಸಿದರು.