ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪರಿಶಿಷ್ಟರ ಹಣ ಗ್ಯಾರಂಟಿಗೆ ಬಳಕೆ ಆರೋಪ: ಮದ್ದೂರಿನಲ್ಲಿ ಪ್ರತಿಭಟನೆ

Published 26 ಜುಲೈ 2024, 14:12 IST
Last Updated 26 ಜುಲೈ 2024, 14:12 IST
ಅಕ್ಷರ ಗಾತ್ರ

ಮದ್ದೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ₹25,000 ಕೋಟಿಗಳನ್ನು  ಗ್ಯಾರಂಟಿ ಯೋಜನೆಗಳಿಗೆ ಬಳಕೆ ಮಾಡಲು ರಾಜ್ಯ ಸರ್ಕಾರವು ಮುಂದಾಗಿರುವ ಕ್ರಮವನ್ನು ಖಂಡಿಸಿ ಹಾಗೂ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಶುಕ್ರವಾರ ಪಟ್ಟಣದ ತಾಲ್ಲೂಕು ಕಚೇರಿಯ ಮುಂದೆ ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

‘ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಸದಾ ಸಿದ್ಧ ಎಂದು ಹೇಳಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಪಕ್ಷವು ಎಸ್‌ಸಿಪಿ ಮತ್ತು ಟಿಎಸ್‌ಪಿ ಅನುದಾನವನ್ನು ಅಧಿಕಾರ ಉಳಿಸಿಕೊಳ್ಳಲು ಗ್ಯಾರಂಟಿ ಯೋಜನೆಗಳಿಗೆ ಖರ್ಚು ಮಾಡುವ ಕ್ರಮವನ್ನು ಬಿಟ್ಟು ಕೂಡಲೇ ಮೀಸಲಿಟ್ಟಂತೆ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಅಭಿವೃದ್ಧಿಗೆ ಬಳಕೆ ಮಾಡಬೇಕು. ಇಲ್ಲದಿದ್ದರೆ ಹೋರಾಟ ನಡೆಸಬೇಕಾಗುತ್ತದೆ’ ಎಂದು ಪ್ರತಿಭಟನಕಾರರು ಎಚ್ಚರಿಸಿದರು.

‘ತಾಲ್ಲೂಕು ವ್ಯಾಪ್ತಿಯಲ್ಲಿನ ಹಲವು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಜನರಿಗೆ ಸ್ಮಶಾನದ ಸಮಸ್ಯೆ ಉದ್ಭವಿಸಿದ್ದು, ಕೂಡಲೇ ಅಂತಹ ಗ್ರಾಮಗಳನ್ನು ಗುರುತಿಸಿ, ಮಂಜೂರು ಮಾಡಿ, ಮೂಲ ಸೌಕರ್ಯಗಳನ್ನು ಒದಗಿಸಬೇಕು’ ಎಂದು ಅವರು ಒತ್ತಾಯಿಸಿದರು.

‘ಪಟ್ಟಣದ ವ್ಯಾಪ್ತಿಯಲ್ಲಿ 1 ದೇಗುಲ ಗುಂಟೆ ಹಾಗೂ 5 ಗುಂಟೆ ಗ್ರಾಮ ಠಾಣಾ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಎಸ್ ಸಿ, ಎಸ್‌ಟಿ ಆಯೋಗದ ಆದೇಶವನ್ನು ಪಾಲಿಸಿಲ್ಲ ಎಂದು ಆರೋಪಿಸಿದರು.

‘ತಾಲ್ಲೂಕಿನ ಹೆಮ್ಮನಹಳ್ಳಿ ಗ್ರಾಮ ಪಂಚಾಯಿತಿ ಪಿಡಿಒ ಲೀಲಾವತಿ ಅವರು ಎಸ್‌ಸಿಪಿ ಹಾಗೂ ಟಿಎಸ್‌ಪಿ ಅನುದಾನವನ್ನು ಆ ವರ್ಷದಲ್ಲೇ ಖರ್ಚು ಮಾಡದೇ ಕರ್ತವ್ಯ ಲೋಪವೆಸಗಿದ್ದು, ಅವರ ವಿರುದ್ಧ ‌ಕ್ರಮ ಕೈಗೊಳ್ಳಬೇಕು ಸೇರಿದಂತೆ ಹಲವು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಉಪ ವಿಭಾಗಾಧಿಕಾರಿ ಶಿವಮೂರ್ತಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಲಾಯಿತು.

ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ಅಂದಾನಿ ಸೋಮನಹಳ್ಳಿ, ಶಿವು, ಬೋರಯ್ಯ,ಮಂಜು, ಮೂರ್ತಿ,ಶಂಕರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೋರಯ್ಯ ಸೇರಿದಂತೆ ಹಲವರು ನೇತೃತ್ವ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT