ಸೋಮವಾರ, 8 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಗ್ಯಾರಂಟಿಗಳಿಂದ ಅಭಿವೃದ್ಧಿ ಕುಂಠಿತವಾಗಿಲ್ಲ: ಸಚಿವ ಭೋಸರಾಜು

Published 5 ಜುಲೈ 2024, 12:38 IST
Last Updated 5 ಜುಲೈ 2024, 12:38 IST
ಅಕ್ಷರ ಗಾತ್ರ

ಮೈಸೂರು: ‘ಪಂಚ ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕುಂಠಿತವಾಗಿಲ್ಲ. ನಮ್ಮ ಇಲಾಖೆಗೆ ಅಗತ್ಯ ಅನುದಾನ ಲಭ್ಯವಾಗುತ್ತಿದೆ’ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್. ಭೋಸರಾಜು ತಿಳಿಸಿದರು.

ಇಲ್ಲಿ ಪತ್ರಕರ್ತರೊಂದಿಗೆ ಶುಕ್ರವಾರ ಮಾತನಾಡಿದ ಅವರು, ‘ಗ್ಯಾರಂಟಿ ಯೋಜನೆಗಳು ಬಹಳಷ್ಟು ಜನರ ಜೀವನಮಟ್ಟ ಸುಧಾರಣೆಗೆ ಕಾರಣವಾಗಿವೆ. ದೇಶದಲ್ಲೇ ಪ್ರಪ್ರಥಮ ಬಾರಿಗೆ ಇಂತಹ ಘೋಷಣೆ ಮಾಡಿ ಸಮರ್ಪಕವಾಗಿ ಅನುಷ್ಠಾನಗೊಳಿಸಿದ ರಾಜ್ಯ ನಮ್ಮದಾಗಿದೆ’ ಎಂದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರ ನೇತೃತ್ವದಲ್ಲಿ ನಮ್ಮ ಸರ್ಕಾರದ ಅಭಿವೃದ್ಧಿಯ ಪಥದಲ್ಲಿ ಸಾಗಿದೆ. ಗ್ಯಾರಂಟಿ ಯೋಜನೆಗಳಿಂದ ಪ್ರಗತಿ ಕುಂಠಿತವಾಗಿದೆ; ಅನುದಾನ ದೊರೆಯುತ್ತಿಲ್ಲ ಎಂಬ ಬಿಜೆಪಿ ಮುಖಂಡರ ಆರೋಪದಲ್ಲಿ ಹುರುಳಿಲ್ಲ’ ಎಂದು ಹೇಳಿದರು.

‘ಲೋಕಸಭೆ ಚುನಾವಣೆಯ ಹಿನ್ನಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳು ಹೆಚ್ಚಾಗಿ ಪ್ರಚಾರವಾಗಲಿಲ್ಲ. ಆದರೆ, ಎಲ್ಲಾ ಇಲಾಖೆಗಳಿಗೂ ಅಗತ್ಯ ಅನುದಾನ ದೊರೆಯುತ್ತಿದೆ’ ಎಂದು ಸ್ಪಷ್ಟಪಡಿಸಿದರು.

‘ಮುಡಾ ನಿವೇಶನ ಹಂಚಿಕೆ ವಿಷಯದಲ್ಲಿ ಬಿಜೆಪಿ ನಾಯಕರು ರಾಜಕೀಯ ಮಾಡುತ್ತಿದ್ದಾರೆ. ಮುಖ್ಯಮಂತ್ರಿ ಪತ್ನಿಗೆ ಮುಡಾ ಸ್ವಾಧೀನಪಡಿಸಿಕೊಂಡಿರುವ ಭೂಮಿಯ ಬದಲಿಗೆ ನಿವೇಶನ ನೀಡಲಾಗಿದೆ. ಇದನ್ನು ಮುಖ್ಯಮಂತ್ರಿಯೂ ಸ್ಪಷ್ಟ‍‍ಪಡಿಸಿದ್ದಾರೆ. ಹೀಗಿದ್ದರೂ, ಬಿಜೆಪಿಯವರು ಅನಗತ್ಯ ಆರೋಪಗಳನ್ನು ಮಾಡುತ್ತಿದ್ದಾರೆ. ಬಿಜೆಪಿಯವರು ನಾಯಕತ್ವದ ಕೊರತೆ ಎದ್ದು ಕಾಣುತ್ತಿದ್ದು, ಜೆಡಿಎಸ್‌ ಮೇಲೆ ಅವಲಂಬಿತರಾಗಿ ಇಲ್ಲ ಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ’ ಎಂದು ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT