ಗುರುವಾರ, 4 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಲಿಂಕ್ ಕೆನಾಲ್‌ಗೆ ಭದ್ರತೆ: ಸಚಿವ ಜಿ.ಪರಮೇಶ್ವರ

Published 2 ಜುಲೈ 2024, 4:16 IST
Last Updated 2 ಜುಲೈ 2024, 4:16 IST
ಅಕ್ಷರ ಗಾತ್ರ

ತುಮಕೂರು: ರೈತರು, ಸಾರ್ವಜನಿಕರ ವಿರೋಧದ ನಡುವೆ ಆರಂಭಿಸಿರುವ ಹೇಮಾವತಿ ಎಕ್ಸ್‌‍ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿಗೆ ಪೊಲೀಸ್ ಭದ್ರತೆ ಒದಗಿಸಲು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಮುಂದಾಗಿದ್ದಾರೆ.

ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ನಾಲೆ ನಿರ್ಮಾಣಕ್ಕೆ ಸಚಿವ ಸಂಪುಟ ಸಭೆಯಲ್ಲೇ ಒಪ್ಪಿಗೆ ನೀಡಲಾಗಿದೆ. ಕಾನೂನು, ಸುವ್ಯವಸ್ಥೆ ಕಾಪಾಡುವ ಪ್ರಶ್ನೆ ಬಂದಾಗ ರಕ್ಷಣೆ ನೀಡಬೇಕಾಗುತ್ತದೆ. ಅದೇ ರೀತಿಯಲ್ಲಿ ಹೇಮಾವತಿ ಕಾಮಗಾರಿಗೂ ಭದ್ರತೆ ಕೊಡಬೇಕಾಗುತ್ತದೆ’ ಎಂದು ಹೇಳಿದರು.

ಬೆಂಗಳೂರಿನಲ್ಲಿ ಇತ್ತೀಚೆಗೆ ಜಲಸಂಪನ್ಮೂಲ ಸಚಿವರೂ ಆದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಸಭೆ ನಡೆಯಿತು. ‘ಜಿಲ್ಲೆಯ ಜನರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಲಾಗುವುದು. ಕಾಮಗಾರಿ ಮುಂದುವರಿಸಲು ಸಹಕಾರ ನೀಡಬೇಕು’ ಎಂದು ಅವರು ಮನವಿ ಮಾಡಿದರು. ಅದಕ್ಕೆ ಜಿಲ್ಲೆಯ ಶಾಸಕರು ಒಪ್ಪಿಕೊಂಡಿದ್ದಾರೆ ಎಂದು ತಿಳಿಸಿದರು.

‘ಎಕ್ಸ್‌‍ಪ್ರೆಸ್ ಲಿಂಕ್ ಕೆನಾಲ್ ಸಂಬಂಧ ತಾಂತ್ರಿಕ ಸಮಿತಿ ರಚಿಸಿ ವರದಿ ಪಡೆಯಲು ಶಾಸಕರಾದ ಬಿ.ಸುರೇಶ್‌ಗೌಡ, ಎಂ.ಟಿ.ಕೃಷ್ಣಪ್ಪ, ಸಿ.ಬಿ.ಸುರೇಶ್‌ಬಾಬು ಒಪ್ಪಿಕೊಂಡಿದ್ದಾರೆ. ಇನ್ನೂ ಸಮಿತಿ ರಚನೆಯಾಗಿಲ್ಲ. ಶಿವಕುಮಾರ್ ಅವರಿಗೆ ಭಾನುವಾರ ನೆನಪು ಮಾಡಿದ್ದೇನೆ. ಸಮಿತಿ ನೀಡುವ ವರದಿ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದು ಸ್ಪಷ್ಟಪಡಿಸಿದರು.

ವಿಮಾನ ನಿಲ್ದಾಣ: ಜಿಲ್ಲೆಯಲ್ಲಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಮೂರು ಸಾವಿರ ಎಕರೆ ಜಮೀನು ಗುರುತಿಸಿ ನೀಡಲಾಗಿದೆ. ಈ ಬಗ್ಗೆ ಜಿಲ್ಲಾ ಮಟ್ಟದಲ್ಲಿ ನಿರ್ಧರಿಸಿದ ನಂತರ ರಾಜ್ಯ ಸರ್ಕಾರಕ್ಕೆ ಪ್ರಸ್ತಾವ ಕಳುಹಿಸಲಾಗುವುದು. ಅಲ್ಲಿಂದ ಕೇಂದ್ರಕ್ಕೆ ಹೋಗಲಿದ್ದು, ನಾಗರಿಕ ವಿಮಾನಯಾನ ಸಚಿವಾಲಯ ಒಪ್ಪಿಗೆ ನೀಡಬೇಕಾಗುತ್ತದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT