ಮಂಗಳವಾರ, 1 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸುಳ್ಳುಗಳಿಂದ ಜನರ ದಾರಿ ತಪ್ಪಿಸುತ್ತಿರುವ ಬಿಜೆಪಿ: ಆರ್. ಧ್ರುವನಾರಾಯಣ

ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ
Published : 9 ಮಾರ್ಚ್ 2021, 17:22 IST
ಫಾಲೋ ಮಾಡಿ
Comments

ಉಡುಪಿ: ಬಿಜೆಪಿ ಸುಳ್ಳುಗಳನ್ನು ಹೇಳುತ್ತ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಬದಲಾವಣೆ, ಅಭಿವೃದ್ಧಿಯ ಬಗ್ಗೆ ಮಾತನಾಡುವ ಪ್ರಧಾನಿ ಗಗನಕ್ಕೇರುತ್ತಿರುವ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ್ ಹೇಳಿದರು.

ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಿ, ಅಡುಗೆ ಅನಿಲ, ಪೆಟ್ರೋಲ್, ಡೀಸೆಲ್ ದರ ನಿರಂತರ ಏರಿಕೆಯಾಗುತ್ತಿದ್ದು,ಬಡ ಮಧ್ಯಮ ವರ್ಗ ಸಂಕಷ್ಟಕ್ಕೆ ಸಿಲುಕಿದೆ. ಅಧಿಕಾರಕ್ಕೆ ಬರುವ ಮೊದಲು ನೀಡಿದ ಭರವಸೆಯನ್ನು ಮರೆತಿರುವ ಬಿಜೆಪಿ ಮತ್ತಷ್ಟು ಹುಸಿ ಭರವಸೆಗಳನ್ನು ನೀಡಿ ಜನರ ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ. ಜನ ವಿರೋಧಿ ನೀತಿಗಳ ವಿರುದ್ಧ, ಬೆಲೆ ಏರಿಕೆ ವಿರುದ್ಧ ಎಲ್ಲೆಡೆ ಪ್ರತಿಭಟನೆ ನಡೆಯುತ್ತಿದ್ದರೂ ಜನರ ಕೂಗನ್ನು ಹತ್ತಿಕ್ಕುವ ಕೆಲಸ ಸರ್ಕಾರದಿಂದ ನಡೆಯುತ್ತಿದೆ.

ಕರಾವಳಿ ಜಿಲ್ಲೆಗಳ ಜೀವನಾಡಿಯಾಗಿದ್ದ ಜಿಲ್ಲೆಯ ಅಭಿವೃದ್ಧಿಗೆ ಕೊಡುಗೆ ನೀಡಿದ್ದ ಬ್ಯಾಂಕುಗಳನ್ನು ಮುಳುಗುವ ಹಂತದಲ್ಲಿರುವ ಉತ್ತರ ಬ್ಯಾಂಕುಗಳೊಂದಿಗೆ ವಿಲೀನಗೊಳಿಸಿ ಕರಾವಳಿ ಜನತೆಗೆ ಬಿಜೆಪಿ ದ್ರೋಹ ಎಸಗಿದೆ ಎಂದರು.

ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ಕಾಂಗ್ರೆಸ್ ರೈತ ವಿರೋಧಿ ಕಾಯ್ದೆ ಹಾಗೂ ಬೆಲೆ ಏರಿಕೆ ವಿರುದ್ಧ ಹಮ್ಮಿಕೊಂಡಿದ್ದ ‘ಜನಧ್ವನಿ’ ಪಾದಯಾತ್ರೆ ಕಾರ್ಯಕ್ರಮ ನಿರೀಕ್ಷೆಗೂ ಮೀರಿ ಜನರನ್ನು ತಲುಪುವಲ್ಲಿ ಯಶಸ್ವಿಯಾಗಿದೆ. ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಯಶಸ್ಸಿಗೆ ಕಾರಣರಾಗಿದ್ದು, ಮುಂಬರುವ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಈಗಿನಿಂದಲೇ ತಯಾರಿ ನಡೆಸುತ್ತಿದ್ದು, ಗ್ರಾಮೀಣ ಮಟ್ಟದಲ್ಲಿ ಸಮಿತಿಗಳನ್ನು ರಚಿಸಿ ಉಸ್ತುವಾರಿಗಳನ್ನು ನೇಮಿಸಲಾಗಿದೆ. ಬ್ಲಾಕ್ ಅಧ್ಯಕ್ಷರೊಂದಿಗೆ ಹೊಂದಾಣಿಕೆಯಿಂದ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.

ಮಾಜಿ ಸಚಿವ ವಿನಯ ಕುಮಾರ್ ಸೊರಕೆ ಮಾತನಾಡಿ, ಬಿಜೆಪಿಯ ಜನವಿರೋಧಿ ನೀತಿಗಳಿಂದ ಜನರು ರೋಸಿಹೋಗಿದ್ದು, ಸರ್ಕಾರದ ವೈಫಲ್ಯಗಳನ್ನು ಜನರಿಗೆ ತಿಳಿಸುವ ಕೆಲಸವನ್ನು ಕಾರ್ಯಕರ್ತರು ಮಾಡಬೇಕಿದೆ ಎಂದರು.

ಮಾಜಿ ವಿಧಾನ ಪರಿಷತ್ ಸಭಾಧ್ಯಕ್ಷ ಪ್ರತಾಪಚಂದ್ರ ಶೆಟ್ಟಿ, ಮಾಜಿ ಶಾಸಕ ಗೋಪಾಲ ಪೂಜಾರಿ, ಎಂ.ಎ.ಗಫೂರ್, ಪ್ರಸಾದ್‍ರಾಜ್ ಕಾಂಚನ್, ವೆರೋನಿಕಾ ಕರ್ನೇಲಿಯೋ, ದಿನೇಶ್ ಪುತ್ರನ್, ಹರೀಶ್ ಕಿಣಿ, ಶ್ಯಾಮಲ ಭಂಡಾರಿ, ಕೃಷ್ಣಮೂರ್ತಿ ಕಾರ್ಕಳ, ಮುರಳಿ ಶೆಟ್ಟಿ, ಬಿ.ನರಸಿಂಹ ಮೂರ್ತಿ, ಕಿಶನ್ ಹೆಗ್ಡೆ ಕೊಳ್ಕೆಬೈಲ್, ಕುಶಲ್ ಶೆಟ್ಟಿ, ಕೆ.ಅಣ್ಣಯ್ಯ ಶೇರಿಗಾರ್ ಉಪಸ್ಥಿತರಿದ್ದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ನೀರೆ ಕೃಷ್ಣ ಶೆಟ್ಟಿ ಸ್ವಾಗತಿಸಿದರು. ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ ವಂದಿಸಿದರು. ವಕ್ತಾರ ಭಾಸ್ಕರ್ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT