ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಕಾಲರಾ ಭೀತಿ: ಸ್ವಚ್ಛತೆಗೆ ಆದ್ಯತೆ ನೀಡಿ’

ಸಮನ್ವಯ ಸಮಿತಿ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಸಲಹೆ
Published : 19 ಸೆಪ್ಟೆಂಬರ್ 2024, 6:50 IST
Last Updated : 19 ಸೆಪ್ಟೆಂಬರ್ 2024, 6:50 IST
ಫಾಲೋ ಮಾಡಿ
Comments

ಉಡುಪಿ: ಜಿಲ್ಲೆಯ ಕೆಲವು ಭಾಗಗಳಲ್ಲಿ ಕಾಲರಾ ಪ್ರಕರಣಗಳು ಕಂಡುಬಂದಿದ್ದು, ಸಾರ್ವಜನಿಕರು ಈ ಬಗ್ಗೆ ಎಚ್ಚರದಿಂದ ಇದ್ದು, ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ವಿದ್ಯಾಕುಮಾರಿ ತಿಳಿಸಿದರು.

ನಗರದ ರಜತಾದ್ರಿಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ಮಟ್ಟದ ಕಣ್ಗಾವಲು ಸಮಿತಿ ಸಭೆ ಹಾಗೂ ಡೆಂಗಿ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯಲ್ಲಿ ಕಳೆದ ವಾರದಲ್ಲಿ 11 ಕಾಲರಾ ಪ್ರಕರಣಗಳು ವರದಿಯಾಗಿದ್ದು, ಕಾರ್ಕಳದ ಈದು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ 5 ಪ್ರಕರಣಗಳು ಕಂಡುಬಂದರೆ, ಮಲ್ಪೆ, ಶಿರ್ವ, ಕಾಪು, ಕೆಮ್ಮಣ್ಣುವಿನಲ್ಲೂ ಪ್ರಕರಣಗಳು ವರದಿಯಾಗಿವೆ ಎಂದು ತಿಳಿಸಿದರು.

ಸಾರ್ವಜನಿಕರು ಕಾಲರಾ ರೋಗದ ಬಗ್ಗೆ ಮುಂಜಾಗ್ರತೆ ವಹಿಸಬೇಕು. ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಬೇಕು ಎಲ್ಲಾ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ತೊಳೆದು ಉಪಯೋಗಿಸಬೇಕು. ಊಟ ತಯಾರಿ, ಊಟ ಮಾಡುವ ಮುನ್ನ ಕೈಗಳನ್ನು ಸಾಬೂನಿನಿಂದ ಸ್ವಚ್ಛಗೊಳಿಸಬೇಕು. ಹೋಟೆಲ್, ರೆಸ್ಟೊರೆಂಟ್‌ಗಳಲ್ಲಿ ಜನರಿಗೆ ಕುಡಿಯಲು ಬಿಸಿ ನೀರನ್ನು ನೀಡಬೇಕು. ಹೋಟೆಲ್‌ಗಳಲ್ಲಿ ಬಳಸುವ ಲೋಟ, ತಟ್ಟೆ, ಪಾತ್ರೆಗಳನ್ನು ಸಹ ಬಿಸಿ ನೀರಿನಲ್ಲಿ ತೊಳೆಯಬೇಕು. ಯಾವುದೇ ಸಮುದ್ರದ ಉತ್ಪನ್ನಗಳನ್ನು ಮುಟ್ಟಿದಾಗ ಸರಿಯಾಗಿ ಕೈತೊಳೆದು ಆಹಾರ ಪದಾರ್ಥಗಳನ್ನು ಮುಟ್ಟುವುದು ಸೂಕ್ತ ಎಂದರು.

ಸಾರ್ವಜನಿಕರು ರಸ್ತೆ ಬದಿಯಲ್ಲಿ ಮಾರಾಟ ಮಾಡುವ ತಿನಿಸು ಹಾಗೂ ತಳ್ಳು ಗಾಡಿಯಲ್ಲಿ ಮಾರಾಟ ಮಾಡುವ ಆಹಾರಗಳನ್ನು ಹಾಗೂ ಹಣ್ಣುಗಳನ್ನು ಸೇವಿಸಬಾರದು. ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಲ್ಲಿ ಮಕ್ಕಳು ಕೈಗಳನ್ನು ಸ್ವಚ್ಛವಾಗಿ ತೊಳೆದು ಆಹಾರ ಉತ್ಪನ್ನಗಳನ್ನು ಬಳಸುವ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

ಕಾಲರಾ ಸೋಂಕು ಅತಿಸಾರ, ನಿರ್ಜಲೀಕರಣಕ್ಕೆ ಕಾರಣವಾಗಬಹುದು. ವಿಬ್ರಿಯೊ ಕಾಲರಾ ಎಂಬ ಬ್ಯಾಕ್ಟಿರಿಯಾದಿಂದ ಕಲುಷಿತವಾದ ಆಹಾರವನ್ನು ತಿನ್ನುವುದರಿಂದ ಈ ರೋಗ ಹರಡುತ್ತದೆ. ಸ್ವಚ್ಛತೆಗೆ ಆದ್ಯತೆ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುವುತ್ತದೆ ಎಂದು ವಿವರಿಸಿದರು.

ಮನೆಗೆ ತರುವ ತರಕಾರಿ, ಹಣ್ಣು ಹಾಗೂ ಸಮುದ್ರ ಉತ್ಪನ್ನಗಳನ್ನು ಚೆನ್ನಾಗಿ ಸ್ವಚ್ಛಗೊಳಿಸಿ ಬಳಸಬೇಕು. ತೀವ್ರವಾದ ಅತಿಸಾರ, ವಾಂತಿ ಹಾಗೂ ನಿರ್ಜಲೀಕರಣದಂತಹ ರೋಗ ಲಕ್ಷಣಗಳು ಕಂಡುಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಬೇಕು ಎಂದರು.

ಸ್ಥಳೀಯ ಸಂಸ್ಥೆಗಳು ಸಾರ್ವಜನಿಕ ಸ್ಥಳಗಳು, ಬಸ್ ನಿಲ್ದಾಣ ರೈಲು ನಿಲ್ದಾಣ, ಸಾರ್ವಜನಿಕ ಶೌಚಾಲಯಗಳಲ್ಲಿ ನೈರ್ಮಲ್ಯವನ್ನು ಕಾಪಾಡಲು ಹೆಚ್ಚಿನ ಆದ್ಯತೆ ನೀಡಬೇಕು ಎಂದು ಸೂಚನೆ ನೀಡಿದರು.

ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಡಾ.ಅನಿಲ್ ರಾಣಾ, ಸೋಮಶೇಖರ ಭಟ್, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಐ.ಪಿ.ಗಡಾದ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ನಾಗರತ್ನ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್ ಭಟ್, ಪೌರಾಯುಕ್ತ ರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ. ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT