ಶನಿವಾರ, 21 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಲಿಂಗತ್ವ ಅಲ್ಪಸಂಖ್ಯಾತರಿಗೆ ಸೌಲಭ್ಯ ತಲುಪಿಸಿ’

ಕುಂದು ಕೊರತೆ ಸಭೆಯಲ್ಲಿ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸೂಚನೆ
Published : 21 ಸೆಪ್ಟೆಂಬರ್ 2024, 5:49 IST
Last Updated : 21 ಸೆಪ್ಟೆಂಬರ್ 2024, 5:49 IST
ಫಾಲೋ ಮಾಡಿ
Comments

ಉಡುಪಿ: ಸರ್ಕಾರ ಲಿಂಗತ್ವ ಅಲ್ಪಸಂಖ್ಯಾತರ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳ ಬಗ್ಗೆ ಅವರಲ್ಲಿ ಅರಿವು ಮೂಡಿಸಿ ಅವರನ್ನು ಇದರ ಫಲಾನುಭವಿಗಳನ್ನಾಗಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಕೆ.ವಿದ್ಯಾಕುಮಾರಿ ಸೂಚನೆ ನೀಡಿದರು.

ಮಣಿಪಾಲದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಇರುವ ಲಿಂಗತ್ವ ಅಲ್ಪಸಂಖ್ಯಾತರು ಸರ್ಕಾರದ ಯೋಜನೆಗಳ ಲಾಭ ಪಡೆಯುವುದರೊಂದಿಗೆ ಸ್ವಯಂ ಉದ್ಯೋಗ ಕೈಗೊಂಡು ಆರ್ಥಿಕವಾಗಿ ಸಬಲರಾಗಬೇಕು ಎಂದರು.

ಲಿಂಗತ್ವ ಅಲ್ಪಸಂಖ್ಯಾತರು ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಪುನರ್ವಸತಿ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳಲು ಪ್ರೋತ್ಸಾಹಧನ ನೀಡಲಾಗುತ್ತಿದೆ. ಸಮುದಾಯ ಆಧಾರಿತ ಸಂಸ್ಥೆಯಲ್ಲಿ ನೋಂದಣಿ ಆಗಿರುವವರು ಈ ಯೋಜನೆಯ ಲಾಭ ಪಡೆಯಬಹುದು ಎಂದು ಹೇಳಿದರು.

ಪ್ರಸ್ತುತ ಸಾಲಿನಲ್ಲಿ 15 ಜನರಿಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಆದರೆ ಒಬ್ಬರೇ ಅರ್ಜಿ ಸಲಿಸಿದ್ದು, ಈ ಯೋಜನೆಯಡಿ ಹೆಚ್ಚು ಜನರು ಅರ್ಜಿ ಸಲ್ಲಿಸುವುದರೊಂದಿಗೆ ಇದರ ಸದುಪಯೋಗ ಪಡೆಯಬೇಕು ಎಂದರು.

ಸರ್ಕಾರಿ ಉದ್ಯೋಗಗಳಲ್ಲಿ ಲಿಂಗತ್ವ ಅಲ್ಪಸಂಖ್ಯಾತರಿಗೆ ಮೀಸಲಾತಿ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಲಿಂಗತ್ವ ಅಲ್ಪಸಂಖ್ಯಾತರು ಸಭೆಯ ಮುಂದಿರಿಸಿದರು.

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ಟಿ. ಸಿದ್ಧಲಿಂಗಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ಪೌರಾಯುಕ್ತ ರಾಯಪ್ಪ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಜಿಲ್ಲಾ ನಿರೂಪಣಾ ಅಧಿಕಾರಿ ಅನುರಾಧ ಹಾದಿಮನಿ, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ. ಚಿದಾನಂದ ಸಂಜು, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ವಿವಿಧ ಲಿಂಗತ್ವ ಅಲ್ಪಸಂಖ್ಯಾತರ ಸಮುದಾಯದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.

32 ಮಂದಿಯಿಂದ ನೋಂದಣಿ

ಗೃಹಲಕ್ಷ್ಮಿ ಯೋಜನೆಯನ್ನು ಲಿಂಗತ್ವ ಅಲ್ಪಸಂಖ್ಯಾತರಿಗೂ ಜಾರಿಗೊಳಿಸಲಾಗಿದ್ದು ರಾಷ್ಟ್ರೀಯ ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಚೀಟಿ ಪಡೆದವರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಚೇರಿಯಲ್ಲಿ ಹೆಸರು ನೋಂದಾಯಿಸಿ ಅದರ ಲಾಭ ಪಡೆಯಬಹುದು. ಜಿಲ್ಲೆಯಲ್ಲಿ ಈವರೆಗೆ 32 ಜನ ಲಿಂಗತ್ವ ಅಲ್ಪಸಂಖ್ಯಾತರು ಈ ಯೋಜನೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT