ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

‘ಲ್ಯಾಟರಲ್‌ ಎಂಟ್ರಿ’ ವಿಷಯದಲ್ಲಿ ಕಾಂಗ್ರೆಸ್ ಬೂಟಾಟಿಕೆ ಬಹಿರಂಗ: ಸಚಿವ ವೈಷ್ಣವ್

Published : 19 ಆಗಸ್ಟ್ 2024, 4:34 IST
Last Updated : 19 ಆಗಸ್ಟ್ 2024, 4:34 IST
ಫಾಲೋ ಮಾಡಿ
Comments

ನವದೆಹಲಿ: ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ‘ಲ್ಯಾಟರಲ್‌ ಎಂಟ್ರಿ’ ಮೂಲಕ ನೇಮಕ ಮಾಡಿಕೊಳ್ಳುವ ಕುರಿತು ಕಾಂಗ್ರೆಸ್‌ ವಿರೋಧ ವ್ಯಕ್ತಪಡಿಸಿರುವ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಕಿಡಿಕಾರಿದ್ದಾರೆ.

ಈ ಕುರಿತು ‘ಎಕ್ಸ್‌’ನಲ್ಲಿ ಪೋಸ್ಟ್ ಮಾಡಿರುವ ಅವರು, ‘ಲ್ಯಾಟರಲ್ ಎಂಟ್ರಿ ವಿಷಯದಲ್ಲಿ ಕಾಂಗ್ರೆಸ್‌ನ ಬೂಟಾಟಿಕೆ ಬಹಿರಂಗವಾಗಿದೆ. ಆಡಳಿತ ಸುಧಾರಣಾ ಆಯೋಗದ ಅಡಿಯಲ್ಲಿ (ಎಆರ್‌ಸಿ) 2005ರಲ್ಲಿ ಯುಪಿಎ ಸರ್ಕಾರವೇ ಲ್ಯಾಟರಲ್ ಎಂಟ್ರಿ ವ್ಯವಸ್ಥೆಯನ್ನು ಜಾರಿಗೊಳಿಸಿತ್ತು. ವೀರಪ್ಪ ಮೊಯ್ಲಿ ಅವರು ಅಧ್ಯಕ್ಷರಾಗಿದ್ದರು. ಯುಪಿಎ ಅವಧಿಯಲ್ಲಿ ಎಆರ್‌ಸಿ ಹೊರಡಿಸಿದ್ದ ಶಿಫಾರಸುಗಳನ್ನು ಪಾರದರ್ಶಕವಾಗಿ ಮತ್ತು ನ್ಯಾಯಯುತವಾಗಿ ಕಾರ್ಯಗತಗೊಳಿಸಲು ಎನ್‌ಡಿಎ ಸರ್ಕಾರವು ಮುಂದಾಗಿದೆ’ ಎಂದು ತಿಳಿಸಿದ್ದಾರೆ.

ಆಡಳಿತ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಲು ಪ್ರಧಾನಿ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಖಾಸಗಿ ಕ್ಷೇತ್ರದ 45 ಪರಿಣತರು ಶೀಘ್ರದಲ್ಲೇ ಕೇಂದ್ರ ಸರ್ಕಾರದ ವಿವಿಧ ಸಚಿವಾಲಯಗಳ ಉನ್ನತ ಹುದ್ದೆಗಳಿಗೆ ಸೇರಲಿದ್ದಾರೆ.

45 ಹುದ್ದೆಗಳಿಗೆ ನೇಮಕಾತಿ ಸಂಬಂಧ ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಈಚೆಗೆ ಜಾಹೀರಾತು ಪ್ರಕಟಿಸಿದೆ. 10 ಜಂಟಿ ಕಾರ್ಯದರ್ಶಿಗಳು ಮತ್ತು 35 ನಿರ್ದೇಶಕರು/ಉಪಕಾರ್ಯದರ್ಶಿ ಹುದ್ದೆಗಳನ್ನು ಪರಿಣತರ ಮೂಲಕ ನೇಮಕಾತಿ ಮಾಡಲಾಗುತ್ತದೆ.

ಸಾಮಾನ್ಯವಾಗಿ ಈ ಹುದ್ದೆಗಳಿಗೆ ಅಖಿಲ ಭಾರತ ಸೇವೆಗಳ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಭಾರತೀಯ ಆಡಳಿತ ಸೇವೆ (ಐಎಎಸ್‌), ಭಾರತೀಯ ಪೊಲೀಸ್ ಸೇವೆ (ಐಪಿಎಸ್‌) ಮತ್ತು ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್‌) ಹಾಗೂ ಮತ್ತು ಇತರ ‘ಎ’ದರ್ಜೆ ಸೇವೆಗಳ ಅಧಿಕಾರಿಗಳು ಇಂತಹ ಪ್ರಮುಖ ಹುದ್ದೆಗಳನ್ನು ನಿಭಾಯಿಸಲಿದ್ದಾರೆ.

ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ‘ಲ್ಯಾಟರಲ್‌ ಎಂಟ್ರಿ’ ಮೂಲಕ ನೇಮಕ ಮಾಡಿಕೊಳ್ಳುವ ಕೇಂದ್ರ ಸರ್ಕಾರದದ ನಡೆಯನ್ನು ಕಾಂಗ್ರೆಸ್‌, ಸಮಾಜವಾದಿ ಪಕ್ಷ, ಬಿಎಸ್‌ಪಿ ಖಂಡಿಸಿವೆ.

‘ಲ್ಯಾಟರಲ್‌ ಎಂಟ್ರಿ’ ಎಂದರೇನು?
ಸರ್ಕಾರದ ಉನ್ನತ ಹುದ್ದೆಗಳಿಗೆ ಖಾಸಗಿ ವಲಯದ ಪರಿಣತರು ಹಾಗೂ ತಜ್ಞರನ್ನು ನೇಮಕ ಮಾಡಿಕೊಳ್ಳುವ ‘ಲ್ಯಾಟರಲ್‌ ಎಂಟ್ರಿ’ ನೇಮಕಾತಿ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ 2018ರಿಂದಲೂ ನಡೆಸಿಕೊಂಡು ಬರುತ್ತಿದೆ. ಇದುವರೆಗೆ ಈ ರೀತಿ 63 ಮಂದಿಯನ್ನು ನೇಮಕ ಮಾಡಿಕೊಳ್ಳಲಾಗಿದೆ. ಈಚೆಗಿನ ಅಂಕಿ–ಅಂಶ ಪ್ರಕಾರ ಅದರಲ್ಲಿ 57 ಮಂದಿ ಸರ್ಕಾರದ ವಿವಿಧ ಸಚಿವಾಲಯಗಳು/ ಇಲಾಖೆಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಂಟಿ ಕಾರ್ಯದರ್ಶಿಗಳ ಹುದ್ದೆಗಳು ಗೃಹ, ಹಣಕಾಸು ಮತ್ತು ಉಕ್ಕು ಒಳಗೊಂಡಂತೆ ಇತರ ಸಚಿವಾಲಯಗಳಿಗೆ ಸಂಬಂಧಿಸಿದ್ದಾಗಿವೆ. ಮೂರು ವರ್ಷಗಳ ಅವಧಿಗೆ ಗುತ್ತಿಗೆ ಆಧಾರದಲ್ಲಿ ನೇಮಕಾತಿ ನಡೆಯಲಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT