ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರಾಂಶುಪಾಲರ ನೇಮಕಾತಿ: ಕಾನೂನು ಸಲಹೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿರ್ಧಾರ

Published : 5 ಜುಲೈ 2024, 15:49 IST
Last Updated : 5 ಜುಲೈ 2024, 15:49 IST
ಫಾಲೋ ಮಾಡಿ
Comments

ಬೆಂಗಳೂರು: ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳ ಪ್ರಾಂಶುಪಾಲರ (ಗ್ರೇಡ್‌–1) ಹುದ್ದೆಗಳ ನೇಮಕಾತಿಗಾಗಿ ನಡೆಸಿದ್ದ ಪರೀಕ್ಷೆಗೆ ಸರ್ಕಾರಿ ಕಾಲೇಜುಗಳ ಪ್ರಾಧ್ಯಾಪಕರು ಆಕ್ಷೇಪ ವ್ಯಕ್ತಪಡಿಸಿದ್ದು, ಕಾನೂನು ಸಲಹೆ ಪಡೆದು ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.

‘ಹಿಂದೆ ಪ್ರಾಂಶುಪಾಲರ ಹುದ್ದೆಗಳನ್ನು ಬಡ್ತಿ ಮೂಲಕ ತುಂಬಲಾಗುತ್ತಿತ್ತು. ಇದೇ ಮೊದಲ ಬಾರಿ ರಾಜ್ಯದ ಸರ್ಕಾರಿ ಪ್ರಥಮದರ್ಜೆ ಕಾಲೇಜುಗಳಲ್ಲಿ ಖಾಲಿ ಇದ್ದ 310 ಪ್ರಾಂಶುಪಾಲರ ಹುದ್ದೆಗಳಿಗೆ ಮೊದಲ ಬಾರಿ ನೇರ ಪರೀಕ್ಷೆಗಳ ಮೂಲಕ ಭರ್ತಿ ಮಾಡಲಾಗುತ್ತಿದೆ. ಖಾಸಗಿ ಕಾಲೇಜುಗಳಲ್ಲಿ ಸೇವೆ ಸಲ್ಲಿಸಿದವರಿಗೂ ಅವಕಾಶ ನೀಡಲಾಗಿದೆ. ಇದರಿಂದ ಸರ್ಕಾರಿ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಪ್ರಾಧ್ಯಾಪಕರಿಗೆ ಅನ್ಯಾಯವಾಗುತ್ತಿದೆ. ನೇಮಕಾತಿ ಪ್ರಕ್ರಿಯೆಯನ್ನು ರದ್ದುಪಡಿಸಬೇಕು. ಬಡ್ತಿ ಮೂಲಕವೇ ಭರ್ತಿ ಮಾಡಬೇಕು’ ಎಂದು ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪ್ರಾಧ್ಯಾಪಕರು ಮುಖ್ಯಮಂತ್ರಿಗೆ ದೂರು ನೀಡಿದ್ದರು.  

ಮುಖ್ಯಮಂತ್ರಿ ಸಿದ್ದರಾಮಯ್ಯ, ಉನ್ನತ ಶಿಕ್ಷಣ ಸಚಿವ ಎಂ.ಸಿ. ಸುಧಾಕರ್, ಅಧ್ಯಾಪಕರ ಸಂಘ ಹಾಗೂ ವಿಚಾರವಾದಿಗಳ ನೇತೃತ್ವದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಈ ಕುರಿತು ಸುದೀರ್ಘ ಚರ್ಚೆ ನಡೆಯಿತು.

ಈಗಾಗಲೇ ಪರೀಕ್ಷೆ ನಡೆದು, ಮೌಲ್ಯಮಾಪನ ಪ್ರಕ್ರಿಯೆಯು ಪೂರ್ಣಗೊಂಡಿದೆ. ಇಂತಹ ಸಮಯದಲ್ಲಿ ಪ್ರಕ್ರಿಯೆ ತಡೆಹಿಡಿದರೆ ಅಭ್ಯರ್ಥಿಗಳು ಕೋರ್ಟ್‌ ಮೊರೆ ಹೋಗುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಹೇಳಿದರು.

ಅಧಿಕಾರಿಗಳ ಮಾತಿಗೆ ಸಮ್ಮತಿ ಸೂಚಿಸಿದ ಮುಖ್ಯಮಂತ್ರಿ, ಈ ಕುರಿತು ಅಡ್ವೋಕೇಟ್‌ ಜನರಲ್‌ ಜೊತೆ ಚರ್ಚಿಸಿ, ಕಾನೂನು ಸಲಹೆ ಪಡೆದ ನಂತರ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದರು.

ಲೇಖಕರಾದ ಬರಗೂರು ರಾಮಚಂದ್ರಪ್ಪ, ಜಿ.ರಾಮಕೃಷ್ಣ, ಬಂಜಗೆರೆ ಜಯಪ್ರಕಾಶ್‌, ವಸುಂಧರಾ ಭೂಪತಿ, ಶೂದ್ರ ಶ್ರೀನಿವಾಸ್‌, ರಾಜ್ಯಸಭಾ ಮಾಜಿ ಸದಸ್ಯ ಎಲ್‌. ಹನುಮಂತಯ್ಯ, ವಿಧಾನ ಪರಿಷತ್‌ ಮಾಜಿ ಸದಸ್ಯ ಕೊಂಡಜ್ಜಿ ಮೋಹನ್‌, ಅಧ್ಯಾಪಕರ ಸಂಘದ ಅಧ್ಯಕ್ಷ ಎಂ.ಡಿ. ಒಕ್ಕುಂದ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT