ಭಾನುವಾರ, 7 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಅಸ್ಸಾಂನಲ್ಲಿ ಪ್ರವಾಹ ಉಲ್ಬಣ: 29 ಜಿಲ್ಲೆಗಳ 16 ಲಕ್ಷ ಮಂದಿಗೆ ತೊಂದರೆ

Published 4 ಜುಲೈ 2024, 14:24 IST
Last Updated 4 ಜುಲೈ 2024, 14:24 IST
ಅಕ್ಷರ ಗಾತ್ರ

ಗುವಾಹಟಿ: ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ಬಿಗಡಾಯಿಸಿದ್ದು, 29 ಜಿಲ್ಲೆಗಳ ಸುಮಾರು 16.50 ಲಕ್ಷ ಮಂದಿ ತೊಂದರೆಗೆ ಸಿಲುಕಿದ್ದಾರೆ. ರಾಜ್ಯದಾದ್ಯಂತ ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ ಎಂದು ಸರ್ಕಾರದ ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. 

ಬ್ರಹ್ಮಪುತ್ರಾ, ದಿಗಾರೂ ಮತ್ತು ಕೊಲೊಂಗ್‌ ನದಿಗಳು ಉಕ್ಕಿ ಹರಿಯುತ್ತಿದ್ದು, ಹಲವು ಪ್ರದೇಶಗಳು ಜಲಾವೃತಗೊಂಡಿವೆ. ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು ಗುವಾಹಟಿ ನಗರ ವ್ಯಾಪ್ತಿಯಲ್ಲಿ ಪ್ರವಾಹ ಪೀಡಿತ ಸ್ಥಳಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದ್ದಾರೆ. 

ಬುಧವಾರ ರಾತ್ರಿ ಎಲ್ಲ ಜಿಲ್ಲಾಧಿಕಾರಿಗಳ ಜತೆ ತುರ್ತು ಸಭೆ ನಡೆಸಿದ್ದ ಅವರು ಸಂತ್ರಸ್ತರ ಪುನರ್ವಸತಿ ಮತ್ತು ಪರಿಹಾರ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ನಿರ್ದೇಶನ ನೀಡಿದ್ದರು.

ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮೊಕ್ಕಾಂ ಹೂಡಿ ಪರಿಹಾರ ಕಾರ್ಯಾಚರಣೆಯ ಉಸ್ತುವಾರಿ ವಹಿಸುವಂತೆಯೂ ಎಲ್ಲ ಸಚಿವರಿಗೆ ಸೂಚಿಸಿದ್ದಾರೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಮೂವರು ನಾಪತ್ತೆಯಾಗಿದ್ದು, ಈ ವರ್ಷದಲ್ಲಿ ಪ್ರವಾಹ ಮತ್ತು ಭೂಕುಸಿತದಿಂದಾಗಿ ಮೃತಪಟ್ಟವರ ಸಂಖ್ಯೆ 56ಕ್ಕೆ ಏರಿಕೆಯಾಗಿದೆ. 

ಪ್ರವಾಹದಿಂದ ಹೆಚ್ಚು ತೊಂದರೆಗೆ ಒಳಗಾಗಿರುವ ಧುಬ್ರಿ ಜಿಲ್ಲೆಯಲ್ಲಿ 2.23 ಲಕ್ಷ ಮಂದಿ ಸಂತ್ರಸ್ತರಾಗಿದ್ದಾರೆ. ದರಾಂಗ್‌ ಮತ್ತು ಲಖೀಂಪುರ ಜಿಲ್ಲೆಗಳಲ್ಲಿ ಕ್ರಮವಾಗಿ 1.84 ಲಕ್ಷ ಹಾಗೂ 1.66 ಲಕ್ಷ ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಾಜಿರಂಗ: 17 ಪ್ರಾಣಿಗಳ ಸಾವು

ಪ್ರವಾಹದಿಂದಾಗಿ ಕಾಜಿರಂಗ ರಾಷ್ಟ್ರೀಯ ಉದ್ಯಾನದಲ್ಲಿ 17 ಪ್ರಾಣಿಗಳು ಸತ್ತಿದ್ದು 72 ಪ್ರಾಣಿಗಳನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು. 11 ಜಿಂಕೆಗಳು ನೀರಿನಲ್ಲಿ ಮುಳುಗಿ ಪ್ರಾಣ ಕಳೆದುಕೊಂಡರೆ ಐದು ಜಿಂಕೆಗಳು ಚಿಕಿತ್ಸೆಯ ವೇಳೆ ಮೃತಪಟ್ಟಿವೆ.

ಖಡ್ಗಮೃಗದ ಮರಿ ಕಾಡುಬೆಕ್ಕು ಮೊಲ ನೀರುನಾಯಿ ಮತ್ತು 63 ಜಿಂಕೆಗಳನ್ನು ರಕ್ಷಿಸಲಾಗಿದೆ.  ನೆರೆ ನೀರಿನಿಂದ ರಕ್ಷಿಸಲಾದ 26 ಪ್ರಾಣಿಗಳಿಗೆ ಚಿಕಿತ್ಸೆ ಮುಂದುವರಿದಿದ್ದು 29 ಪ್ರಾಣಿಗಳು ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿವೆ ಎಂದು ಮಾಹಿತಿ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT