ರಾಷ್ಟ್ರಪತಿ ಔತಣಕೂಟಕ್ಕೆ ದೇವೇಗೌಡ ಮನಮೋಹನ್ ಸಿಂಗ್ ಗೈರು
ಜಿ20 ಶೃಂಗಸಭೆ ಹಿನ್ನೆಲೆಯಲ್ಲಿ ಜಾಗತಿಕ ನಾಯಕರಿಗಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಶನಿವಾರ ಆಯೋಜಿಸಿರುವ ಔತಣಕೂಟದಲ್ಲಿ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಎಚ್.ಡಿ.ದೇವೇಗೌಡ ಅವರು ಪಾಲ್ಗೊಳ್ಳುತ್ತಿಲ್ಲ. ಆರೋಗ್ಯ ಸಮಸ್ಯೆಯಿಂದಾಗಿ ಈ ಇಬ್ಬರು ಮಾಜಿ ಪ್ರಧಾನಿಗಳು ಔತಣಕೂಟದಲ್ಲಿ ಭಾಗಿಯಾಗುತ್ತಿಲ್ಲ ಎಂದು ಮೂಲಗಳು ಹೇಳಿವೆ. ಜಿ20 ಶೃಂಗಸಭೆಗೆ ಯಶಸ್ಸು ಕೋರಿ ದೇವೇಗೌಡ ಅವರು ‘ಎಕ್ಸ್’ನಲ್ಲಿ ಪೋಸ್ಟ್ ಮಾಡಿದ್ದಾರೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಸಿಂಗ್ ಮಾನ್ ಹಿಮಾಚಲ ಪ್ರದೇಶ ಮುಖ್ಯಮಂತ್ರಿ ಸುಖ್ವಿಂದರ್ ಸಿಂಗ್ ಸುಖ್ಖು ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್ ಪಾಲ್ಗೊಳ್ಳುವರು. ಛತ್ತೀಸಗಢ ಮತ್ತು ರಾಜಸ್ಥಾನ ಮುಖ್ಯಮಂತ್ರಿಗಳು ಪಾಲ್ಗೊಳ್ಳುವುದು ಖಚಿತವಾಗಿಲ್ಲ. ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಳ್ಳುತ್ತಿಲ್ಲ ಎಂದು ಅವರ ಆಪ್ತ ಮೂಲಗಳು ಹೇಳಿವೆ. ಖರ್ಗೆಗೆ ನೀಡದ ಆಹ್ವಾನ: ರಾಹುಲ್ ಕಿಡಿ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕರಾಗಿರುವ ಪಕ್ಷದ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನು ಈ ಔತಣಕೂಟಕ್ಕೆ ಆಹ್ವಾನಿಸಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ‘ಅವರು ವಿರೋಧ ಪಕ್ಷದ ನಾಯಕನನ್ನು ಆಹ್ವಾನಿಸದಿರಲು ನಿರ್ಧರಿಸಿದ್ದಾರೆ. ಇದು ಬೇರೆ ಏನನ್ನೋ ಹೇಳುತ್ತದೆ’ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ‘ದೇಶದ ಶೇ 60ರಷ್ಟು ಜನಸಂಖ್ಯೆಯನ್ನು ಪ್ರತಿನಿಧಿಸುವ ನಾಯಕನಿಗೆ ಅವರು ಗೌರವ ನೀಡುತ್ತಿಲ್ಲ ಎಂಬುದನ್ನು ಇದು ತೋರಿಸುತ್ತದೆ. ಈ ಬಗ್ಗೆ ಜನರು ಯೋಚಿಸಬೇಕು’ ಎಂದು ವಿದೇಶ ಪ್ರವಾಸದಲ್ಲಿರುವ ಅವರು ಬ್ರುಸೆಲ್ಸ್‌ನಲ್ಲಿ ಸುದ್ದಿಗಾರರಿಗೆ ಹೇಳಿದ್ದಾರೆ.