ಭಾನುವಾರ, 22 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬಿಜೆಪಿ ಶಾಸಕ ಮುನಿರತ್ನಗೆ ಎಸ್‌ಐಟಿ ತನಿಖೆಯ ಬಿಸಿ

Published : 21 ಸೆಪ್ಟೆಂಬರ್ 2024, 22:30 IST
Last Updated : 21 ಸೆಪ್ಟೆಂಬರ್ 2024, 22:30 IST
ಫಾಲೋ ಮಾಡಿ
Comments

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ವಿವಿಧ ಪೊಲೀಸ್‌ ಠಾಣೆಗಳಲ್ಲಿ ಈಗಾಗಲೇ ದಾಖಲಾಗಿರುವ ಮತ್ತು ಮುಂದೆ ದಾಖಲಾಗಬಹುದಾದ ಎಲ್ಲ ಪ್ರಕರಣಗಳ ಸಮಗ್ರ ತನಿಖೆಗೆ ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ(ಎಸ್‌ಐಟಿ) ರಚಿಸಿದೆ.

ಸಿಐಡಿ (ಆರ್ಥಿಕ ಅಪರಾಧಗಳು) ಎಡಿಜಿಪಿ ಬಿ.ಕೆ. ಸಿಂಗ್‌ ನೇತೃತ್ವದಲ್ಲಿ ಈ ಎಸ್‌ಐಟಿ ಕಾರ್ಯ ನಿರ್ವಹಿಸಲಿದೆ. ಕೇಂದ್ರ ವಲಯದ ಐಜಿಪಿ ಲಾಬೂರಾಮ್, ರೈಲ್ವೆ ಎಸ್‌ಪಿ ಸೌಮ್ಯಲತಾ, ಎಸ್‌ಪಿ ಸಿ.ಎ. ಸೈಮನ್‌ ಅವರು ತಂಡದ ಸದಸ್ಯರಾಗಿರುತ್ತಾರೆ.

ಮುನಿರತ್ನ ವಿರುದ್ಧ ವೈಯಾಲಿಕಾವಲ್‌ ಠಾಣೆಯಲ್ಲಿ ದಾಖಲಾದ ಎರಡು ಅಪರಾಧ ಪ್ರಕರಣಗಳು ಮತ್ತು ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ದಾಖಲಾದ ಅತ್ಯಾಚಾರ ಮೊಕದ್ದಮೆ ಸೇರಿದಂತೆ ರಾಜ್ಯದ ಇತರ ಎಲ್ಲ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ ಪ್ರಕರಣಗಳ ತನಿಖೆ ನಡೆಸಬೇಕು. ಪೊಲೀಸ್‌ ಮಹಾ ನಿರ್ದೇಶಕರ ಮೂಲಕ ತನಿಖಾ ವರದಿಯನ್ನು ಶೀಘ್ರದಲ್ಲಿ ಸರ್ಕಾರಕ್ಕೆ ಸಲ್ಲಿಸಬೇಕು ಎಂದೂ ಎಸ್‌ಐಟಿಗೆ ಸರ್ಕಾರ ಸೂಚಿಸಿದೆ.

‘ಜಾತಿ ನಿಂದನೆ ಮಾಡಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಹಲ್ಲೆ ಮಾಡಿ, ಲಂಚಕ್ಕೆ ಬೇಡಿಕೆ ಇಟ್ಟಿರುವ ಕುರಿತು ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಸೆ. 13ರಂದು ವೈಯಾಲಿಕಾವಲ್‌ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಾಗಿದೆ. ಮಹಿಳೆಯೊಬ್ಬರು ನೀಡಿದ ದೂರಿನ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ಸೆ. 18ರಂದು ದಾಖಲಾಗಿದೆ. ಈ ಪ್ರಕರಣಗಳ ಗಂಭೀರತೆಯನ್ನು ಪರಿಗಣಿಸಿ ತನಿಖೆಗೆ ವಿಶೇಷ ತನಿಖಾ ತಂಡ ರಚಿಸಲಾಗಿದೆ ಎಂದು ಆದೇಶದಲ್ಲಿ ಗೃಹ ಇಲಾಖೆ ವಿವರಿಸಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿ ಮಾಡಿದ್ದ ಒಕ್ಕಲಿಗ ಸಮುದಾಯದ ಸಚಿವರು, ಶಾಸಕರ ನಿಯೋಗವು ಮುನಿರತ್ನ ಮೇಲಿನ ಪ್ರಕರಣಗಳ ತನಿಖೆಗೆ ವಿಶೇಷ ತನಿಖಾ ತಂಡ ರಚಿಸುವಂತೆ ಮನವಿ ಸಲ್ಲಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT