ಭಾನುವಾರ, 7 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

10 ಮ.ನ.ಪಾ.ಗಳಲ್ಲಿ ₹2 ಸಾವಿರ ಕೋಟಿ ಕಾಮಗಾರಿ: ಸಚಿವ ಸಂಪುಟ ಒಪ್ಪಿಗೆ

Published 4 ಜುಲೈ 2024, 16:29 IST
Last Updated 4 ಜುಲೈ 2024, 16:29 IST
ಅಕ್ಷರ ಗಾತ್ರ

ಬೆಂಗಳೂರು: ನಗರಾಭಿವೃದ್ಧಿ ಇಲಾಖೆಯಡಿ 10 ಮಹಾನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ನಗರ ವಿಕಾಸ ಯೋಜನೆ ಹಂತ–2ರಡಿ ₹2 ಸಾವಿರ ಕೋಟಿ ಮೊತ್ತದ ಕಾಮಗಾರಿ ಕೈಗೆತ್ತಿಕೊಳ್ಳಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಸ್ಮಾರ್ಟ್‌ ಸಿಟಿ ಯೋಜನೆಯಡಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದಕ್ಕಾಗಿ ನಗರಾಭಿವೃದ್ಧಿ ಸಚಿವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಲಾಗಿದೆ ಎಂದು ಸಚಿವ ಎಚ್‌.ಕೆ. ಪಾಟೀಲ ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

₹2 ಸಾವಿರ ಕೋಟಿ ಯೋಜನಾ ಅಂದಾಜಿನಲ್ಲಿ ರಾಜ್ಯ ಸರ್ಕಾರದ ಪಾಲಿನ ಶೇ 7.5 ರಷ್ಟು ಮೊತ್ತ ಅಂದರೆ ₹ 150 ಕೋಟಿ, ಮಹಾನಗರ ಪಾಲಿಕೆಯ ಸ್ವಂತ ಸಂಪನ್ಮೂಲದಿಂದ ಶೇ 7.5 ರಷ್ಟು ಮೊತ್ತ ₹ 150 ಕೋಟಿ ಹಾಗೂ ಯುಐಡಿಎಫ್‌ನಿಂದ ಸಾಲದ ರೂಪದಲ್ಲಿ ಶೇ 85ರಷ್ಟು ಮೊತ್ತ ₹ 17,00 ಕೋಟಿಯಲ್ಲಿ 2024–25 ನೇ ಸಾಲಿನಿಂದ 2026–27ನೇ ಸಾಲಿನವರೆಗೆ ಮೂರು ವರ್ಷಗಳ ಅವಧಿಯಲ್ಲಿ ಪೌರಾಡಳಿತ ನಿರ್ದೇಶನಾಲಯದಿಂದ ರಾಜ್ಯ ಮಟ್ಟದಲ್ಲಿ ಟೆಂಡರ್‌ ಕರೆದು ಅನುಷ್ಠಾನಗೊಳಿಸಲು ಒಪ್ಪಿಗೆ ನೀಡಲಾಗಿದೆ ಎಂದರು.

ಇತರ ಪ್ರಮುಖ ನಿರ್ಣಯಗಳು:

  • ಪಂಚಾಯತ್ ರಾಜ್‌ ಸಂಸ್ಥೆಗಳ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣಾ ವಿಭಾಗವನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ವಹಿಸಲು ನ್ಯಾಯಮೂರ್ತಿ ಕೆ. ಭಕ್ತವತ್ಸಲ ಆಯೋಗ ಮಾಡಿರುವ ಶಿಫಾರಸು ಕೈಬಿಡಲು ಸಂಪುಟ ಒಪ್ಪಿಗೆ ನೀಡಿದೆ. ಹಾಲಿ ವ್ಯವಸ್ಥೆಯೇ ಮುಂದುವರೆಯಲಿದೆ.

  • ಕೆಜಿಐಡಿ ವಿಮಾ ಯೋಜನೆಯ ಕಡ್ಡಾಯ ವಿಮಾದಾರರಿಗೆ 2018ರಿಂದ 2020 ದ್ವೈವಾರ್ಷಿಕ ಅವಧಿಯಲ್ಲಿ ಚಾಲ್ತಿಯಲ್ಲಿದ್ದ ಎಲ್ಲಾ ಪಾಲಿಸಿಗಳಿಗೆ ವಿಮಾ ಮೊತ್ತದ ಮೇಲೆ ಪ್ರತಿ ಸಾವಿರ ರೂಪಾಯಿಗಳಿಗೆ ಪ್ರತಿ ವರ್ಷಕ್ಕೆ ₹80ರಂತೆ ಲಾಭಾಂಶ ಘೋಷಿಸಲು ಮತ್ತು 2020– 2022 ರ ಅವಧಿಯಲ್ಲಿ ಅವಧಿಪೂರ್ಣ, ಮರಣಜನ್ಯ ಹಾಗೂ ವಿಮಾ ತ್ಯಾಗ ಮೌಲ್ಯಗಳಿಂದ ಹೊರ ಹೋಗಿರುವ ವಿಮಾ ಪಾಲಿಸಿಗಳಿಗೆ ಪ್ರತಿ ಸಾವಿರಕ್ಕೆ ₹80ರಂತೆ ಮಧ್ಯಂತರ ಲಾಭಾಂಶ ಘೋಷಿಸಲು ಒಪ್ಪಿಗೆ

  • 563 ನಗರ ಆರೋಗ್ಯ ಕ್ಷೇಮ ಕೇಂದ್ರಗಳಿಗೆ ಪ್ರಯೋಗಾಲಯಗಳನ್ನು ಬಲಪಡಿಸಲು ಅವಶ್ಯವಿರುವ ಔಷಧಿಗಳು, ಉಪಕರಣಗಳನ್ನು ₹53.66 ಕೋಟಿ ವೆಚ್ಚದಲ್ಲಿ ಖರೀದಿಸಲು ಒಪ್ಪಿಗೆ.

  • ಆನೆಕಲ್‌, ಶಿರಹಟ್ಟಿ, ನೆಲಮಂಗಲ, ಶಿರಹಟ್ಟಿ, ಶೃಂಗೇರಿ, ಯಳಂದೂರು ತಾಲ್ಲೂಕುಗಳಲ್ಲಿ ತಲಾ 100 ಹಾಸಿಗೆಗಳ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗೆ ನಬಾರ್ಡ್‌ ನೆರವಿನಡಿ ₹256.15 ಕೋಟಿ ಭರಿಸಲು ತೀರ್ಮಾನ.

  • ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಗಳನ್ನು ಬಲಪಡಿಸಲು 15 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಮೇಲ್ದರ್ಜೆ ಕೇಂದ್ರಗಳನ್ನಾಗಿ ಮಾಡಲು ಅನುಮತಿ.

  • ಗಣಿ ಬಾಧಿತ ಬಳ್ಳಾರಿ, ವಿಜಯನಗರ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಸಮಗ್ರ ಪರಿಸರ ಯೋಜನೆ ಅನುಷ್ಠಾನಗೊಳಿಸಲು ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ ಸ್ಥಾಪಿಸಲು ಅನುಮೋದನೆ.

  • ಬಾಗಲಕೋಟೆ ಜಿಲ್ಲೆ ಮುಧೋಳ ತಾಲ್ಲೂಕು ರೈತರ ಸಹಕಾರ ಸಕ್ಕರೆ ಕಾರ್ಖಾನೆಯನ್ನು 2024–25ನೇ ಹಂಗಾಮಿನಿಂದ 30 ವರ್ಷ ಖಾಸಗಿಯವರಿಗೆ ಗುತ್ತಿಗೆ ನೀಡಲು ಒಪ್ಪಿಗೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT