ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾವೇರಿ ಮಲಿನ: ವರದಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಸೂಚನೆ

Published 25 ಜೂನ್ 2024, 16:32 IST
Last Updated 25 ಜೂನ್ 2024, 16:32 IST
ಅಕ್ಷರ ಗಾತ್ರ

ಬೆಂಗಳೂರು: ಕಾವೇರಿ ನದಿಗೆ ತ್ಯಾಜ್ಯ ನೀರು ಬಿಡುವ ದೂರಿನ ಬಗ್ಗೆ ಸ್ಥಳ ಪರಿಶೀಲಿಸಿ, ಅದನ್ನು ತಡೆಯಲು ಸ್ಥಳೀಯ ಪ್ರಾಧಿಕಾರಗಳು ಕೈಗೊಂಡ ಕ್ರಮಗಳ ಕುರಿತು ವರದಿ ನೀಡುವಂತೆ ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಸೂಚಿಸಿದ್ದಾರೆ.

ನದಿ ನೀರು ಮಲೀನಗೊಳ್ಳದಂತೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ಲಿಖಿತವಾಗಿ ಸೂಚಿಸಿದ್ದಾರೆ. ಸಂಬಂಧಿಸಿದ ಇಲಾಖೆಗಳ ಸಹಯೋಗದಲ್ಲಿ ಸಮಿತಿ ರಚಿಸಿ ಎರಡು ವಾರದಲ್ಲಿ ವರದಿ ಸಲ್ಲಿಸುವಂತೆ ಅರಣ್ಯ ಮತ್ತು ಪರಿಸರ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ನಿರ್ದೇಶನ ನೀಡಿದ್ದಾರೆ.

ಕಾವೇರಿ ನದಿಗೆ ತ್ಯಾಜ್ಯ ನೀರು ಸೇರ್ಪಡೆಯಾಗಿ ಕಲುಷಿತಗೊಳ್ಳುತ್ತಿದ್ದು, ಮಾಲಿನ್ಯ ತಡೆಗೆ ಕ್ರಮ ಕೈಗೊಳ್ಳಬೇಕೆಂದು ವಿಧಾನ ಪರಿಷತ್‌ ಕಾಂಗ್ರೆಸ್‌ ಸದಸ್ಯ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸಚಿವರಿಗೆ ಮನವಿ ಸಲ್ಲಿಸಿದ್ದರು.

ಕೈಗಾರಿಕೆ ತ್ಯಾಜ್ಯ, ಘನ ತ್ಯಾಜ್ಯ ಅಪಾಯದ ಪ್ರಮಾಣ ಮೀರಿ ನದಿ ನೀರಿಗೆ ಸೇರ್ಪಡೆ ಆಗುತ್ತಿರುವುದರಿಂದ ಅದರ ತಡೆಗೆ ಸರ್ಕಾರ ಕ್ರಮ ವಹಿಸಬೇಕು. ಅದಕ್ಕಾಗಿಯೇ ತಾಂತ್ರಿಕ ಪರಿಣಿತರ ತನಿಖಾ ತಂಡ ರಚಿಸಬೇಕು. ಆ ಮೂಲಕ, ಕೈಗಾರಿಕಾ ಪ್ರದೇಶ, ಒಳಚರಂಡಿ, ಹೋಟೆಲ್, ರೆಸಾರ್ಟ್ ಮತ್ತಿತರ ಪ್ರದೇಶಗಳಿಂದ ಮಲಿನ ನೀರು‌ ಕಾವೇರಿ ನದಿ ಒಡಲು ಸೇರದಂತೆ ನಿಗಾ ವಹಿಸಬೇಕು ಎಂದು ಅವರು ಮನವಿ ಮಾಡಿದ್ದರು.

‘ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಉಗಮಿಸುವ ಕಾವೇರಿ, ಹರಿಯುವ ಮಾರ್ಗದ ಕುಶಾಲನಗರ, ಹುಣಸೂರು, ಪಿರಿಯಾಪಟ್ಟಣ, ಕೆ.ಆರ್. ನಗರ, ಮೈಸೂರು, ಮಂಡ್ಯ, ಶ್ರೀರಂಗಪಟ್ಟಣ,‌ ನಂಜನಗೂಡು, ಟಿ. ನರಸೀಪುರ, ಕೊಳ್ಳೇಗಾಲ ಮುಂತಾದ ಪ್ರಮುಖ ನಗರ-ಪಟ್ಟಣಗಳಲ್ಲಿ ಹಲವು ಕಾರ್ಖಾನೆಗಳು ತಲೆ ಎತ್ತಿವೆ. ಅದರ ತ್ಯಾಜ್ಯವನ್ನು ಸರಿಯಾಗಿ ಸಂಸ್ಕರಿಸದೆ‌ ನೇರವಾಗಿ ನದಿಗೆ ಹರಿಯಲು ಬಿಡುತ್ತಿರುವುದರಿಂದ ನದಿಯ ನೀರು ಕಲುಷಿತಗೊಂಡು ಮಲಿನಗೊಳ್ಳುತ್ತಿದೆ. ಕೈಗಾರಿಕಾ ಪ್ರದೇಶದಿಂದ ಶುದ್ದೀಕರಿಸದ ತ್ಯಾಜ್ಯ ನೀರು ನದಿ ಸೇರುತ್ತಿದ್ದು, ರಾಸಾಯನಿಕ ಮಿಶ್ರಿತ ನೀರಿನಿಂದ ನೊರೆ ಸೃಷ್ಟಿಯಾಗಿ, ಜಲಚರಗಳಿಗೆ ಮಾರಣಾಂತಿಕವಾಗುತ್ತಿದೆ’ ಎಂದೂ ದಿನೇಶ್ ಮನವಿಯಲ್ಲಿ ಉಲ್ಲೇಖಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT