ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಅಧಿಕಾರಿಗಳ ಐಷಾರಾಮಿ ಖರ್ಚು: ಹೈಕೋರ್ಟ್ ಅತೃಪ್ತಿ

ಕಟ್ಟಡ–ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿ
Published 27 ಜೂನ್ 2024, 0:01 IST
Last Updated 27 ಜೂನ್ 2024, 0:01 IST
ಅಕ್ಷರ ಗಾತ್ರ

ಬೆಂಗಳೂರು: ‘ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ನಿಧಿಯಲ್ಲಿ ಸಂಗ್ರಹವಾಗುವ ಸೆಸ್ ಹಣವನ್ನು ಕಾರ್ಮಿಕರ ಕಲ್ಯಾಣ ಮತ್ತು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಖರ್ಚು‌ ಮಾಡಬೇಕೇ ವಿನಃ ಮಂಡಳಿಯ ಅಧಿಕಾರಿಗಳ ಐಷಾರಾಮಿ ಓಡಾಟಕ್ಕಲ್ಲ’ ಎಂದು ಹೈಕೋರ್ಟ್‌ ಅತೃಪ್ತಿ ವ್ಯಕ್ತಪಡಿಸಿದೆ.

‘ಕಟ್ಟಡ ಕಾರ್ಮಿಕರ ಮಕ್ಕಳಿಗೆ ಮೀಸಲಾದ ವರ್ಗದಲ್ಲಿ ಶೈಕ್ಷಣಿಕ ಧನಸಹಾಯ ಮಾಡಲು ನಿರ್ದೇಶಿಸಬೇಕು’ ಎಂದು ಕೋರಿ, ‘ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಫೆಡರೇಶನ್’ ಪ್ರಧಾನ ಕಾರ್ಯದರ್ಶಿ ಕೆ.ಮಹಾಂತೇಶ್‌ ಹಾಗೂ ಇತರ ಮೂವರು ಸಲ್ಲಿಸಿರುವ ರಿಟ್‌ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ನಡೆಸಿತು.

ವಿಚಾರಣೆ ವೇಳೆ ರಾಜ್ಯ ಸರ್ಕಾರದ ಪರ ಹಾಜರಾಗಿದ್ದ ಅಡ್ವೊಕೇಟ್‌ ಜನರಲ್‌ ಕೆ.ಶಶಿಕಿರಣ ಶೆಟ್ಟಿ, ‘ಕಲ್ಯಾಣ ಮಂಡಳಿಯು ಈಗಾಗಲೇ 6 ಲಕ್ಷ ವಿದ್ಯಾರ್ಥಿಗಳಿಗೆ ₹500 ಕೋಟಿ ಶೈಕ್ಷಣಿಕ ಸಹಾಯಧನ ವಿತರಿಸಿದೆ. ಕಟ್ಟಡ ಕಾರ್ಮಿಕರಿಗಾಗಿ ಮಂಡಳಿಯ ಮುಖಾಂತರ ಇನ್ನೂ 19 ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ’ ಎಂದರು.

ಇದಕ್ಕೆ ಪ್ರತಿಯಾಗಿ ಅರ್ಜಿದಾರರ ಪರ ವಕೀಲ ಆದಿತ್ಯ ಚಟರ್ಜಿ, ‘2019ರ ಸಿಎಜಿ ವರದಿಯ ಅನುಸಾರ ಕರ್ನಾಟಕ ಕಟ್ಟಡ ನಿರ್ಮಾಣ ಕಲ್ಯಾಣ ಮಂಡಳಿಯು ತನ್ನ ಆಡಳಿತಾತ್ಮಕ ವೆಚ್ಚವನ್ನು ಕಾನೂನಾತ್ಮಕವಾಗಿ ನಿಗದಿಪಡಿಸಿದ ಶೇ‌ 5ರಷ್ಟನ್ನು ಮೀರಿ ಶೇ 9ರಿಂದ ಶೇ 72ರಷ್ಟು ಹೆಚ್ಚಾಗಿ ಖರ್ಚು ಮಾಡಲಾಗಿದೆ’ ಎಂದು ಆರೋಪಿಸಿದರು.

‘ಘಟನೋತ್ತರ ಅನುಮೋದನೆ‌ ಮೂಲಕ ಮಂಡಳಿಯು ಇನ್ನೋವಾ‌ ಕಾರುಗಳನ್ನು ಖರೀದಿಸಿದ್ದು, ಮಂಡಳಿಯ ನಿಧಿಯನ್ನು ಅನಗತ್ಯವಾಗಿ ಖರ್ಚು ಮಾಡಿದೆ. ಹೈಕೋರ್ಟ್‌ನ ಇದೇ ಪೀಠವು ನೀಡಿದ್ದ ಮಧ್ಯಂತರ ಆದೇಶದಂತೆ ಇಬ್ಬರು ವಿದ್ಯಾರ್ಥಿನಿಯರಿಗೆ ಇನ್ನೂ ಹಣ ಪಾವತಿ ‌ಮಾಡಿಲ್ಲ’ ಎಂಬ ಅಂಶವನ್ನು ನ್ಯಾಯಪೀಠದ ಗಮನಕ್ಕೆ ತಂದರು.

ವೇತನ ಪಾವತಿ: ಈ ಹಿಂದಿನ ಅಂದರೆ 2024ರ ಏಪ್ರಿಲ್‌ 23ರಂದು ಈ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಮೂರ್ತಿ ನಾಗಪ್ರಸನ್ನ ಅವರು, ‘ನಾಲ್ಕು ವಾರದೊಳಗೆ ಎಲ್‌.ಎಲ್‌.ಬಿ ಹಾಗೂ ಎಂ.ಬಿ.ಎ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ಬರು ಅರ್ಜಿದಾರ ವಿದ್ಯಾರ್ಥಿನಿಯರಿಗೆ ದಂಡಸಹಿತ ಶೈಕ್ಷಣಿಕ ಧನಸಹಾಯ ಪಾವತಿಸಬೇಕು’ ಎಂದು ‘ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ’ಗೆ ಆದೇಶಿಸಿದ್ದರು.

ಈ ಕುರಿತಂತೆ ನ್ಯಾಯಪೀಠಕ್ಕೆ ಸ್ಪಷ್ಟನೆ ನೀಡಿದ ಕಲ್ಯಾಣ ಮಂಡಳಿ ಪರ ವಕೀಲರು, ‘ಇಬ್ಬರು ವಿದ್ಯಾರ್ಥಿನಿಯರಿಗೆ ಕೋರ್ಟ್ ಆದೇಶದ ಅನುಸಾರ ₹60,000 ಹಾಗೂ ₹55,000 ಪಾವತಿಸಲಾಗಿದೆ’ ಎಂದು ಪಾವತಿಯ ನಕಲನ್ನು ನೀಡಿದರು. ವಾದ–ಪ್ರತಿವಾದ ಆಲಿಸಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 26ಕ್ಕೆ ಮುಂದೂಡಿದೆ.

ನ್ಯಾಯಮೂರ್ತಿ ಎಂ.ನಾಗಪ್ರಸನ್ನ
ನ್ಯಾಯಮೂರ್ತಿ ಎಂ.ನಾಗಪ್ರಸನ್ನ

* ವಿದ್ಯಾರ್ಥಿನಿಯರಿಗೆ ಹಣ ಪಾವತಿ * ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿ ಈವರೆಗೂ ಮಾಡಲಾಗಿರುವ ಪ್ರತಿಯೊಂದು ಖರ್ಚಿನ ಲೆಕ್ಕವನ್ನು ಮುಂದಿನ ವಿಚಾರಣೆ ವೇಳೆಗೆ ಕೋರ್ಟ್‌ಗೆ ಹಾಜರುಪಡಿಸಬೇಕು

-ಎಂ.ನಾಗಪ್ರಸನ್ನ ನ್ಯಾಯಮೂರ್ತಿ

ಒಂದೊಂದು ರೂಪಾಯಿಯೂ ಸದ್ವಿನಿಯೋಗವಾಗಬೇಕು ಅರ್ಜಿದಾರರ ಪರ ವಕೀಲರ ವಿವರಣೆ ಆಲಿಸಿದ ನ್ಯಾಯಪೀಠ ‘ಕಲ್ಯಾಣ‌ ಮಂಡಳಿಯಲ್ಲಿರುವ ಪ್ರತಿಯೊಂದು ರೂಪಾಯಿಯೂ ಬಡ ಕಾರ್ಮಿಕರ ಕಲ್ಯಾಣ ಮತ್ತು‌ ಅವರ ಮಕ್ಕಳ ಶೈಕ್ಷಣಿಕ ಬದುಕಿಗೆ ವಿನಿಯೋಗ ಆಗಬೇಕು. ಮಂಡಳಿಯಲ್ಲಿ ಸಾವಿರಾರು ‌ಕೋಟಿ ರೂಪಾಯಿ ಸೆಸ್ ಇದ್ದರೂ ಮಕ್ಕಳ ಶೈಕ್ಷಣಿಕ ಧನ ಸಹಾಯವನ್ನು ಶೇ 60-70ರಷ್ಟು ಕಡಿತ ಮಾಡಿರುವ ಕ್ರಮವನ್ನು ಯಾವುದೇ ಕಾರಣದಿಂದಲೂ ಒಪ್ಪಲು ಸಾಧ್ಯವಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT