ಬೆಂಗಳೂರು: ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಕಣ ದಿನೇದಿನೇ ಕಳೆಗಟ್ಟುತ್ತಿದೆ. ಮೂರೂ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ಪೈಪೋಟಿ ತೀವ್ರಗೊಂಡಿದೆ. ಎಲ್ಲ ಪಕ್ಷಗಳ ಕಚೇರಿ– ನಾಯಕರ ಮನೆಗಳಲ್ಲಿ ರಾಜಕೀಯ ಚಟುವಟಿಕೆ ಗರಿಗೆದರಿದೆ. ಗುರುವಾರದ ಬೆಳವಣಿಗೆಗಳೂ ಇದಕ್ಕೆ ಹೊರತಾಗಿರಲಿಲ್ಲ. ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಿಡದಿಯ ತಮ್ಮ ತೋಟದ ಮನೆಯಲ್ಲಿ ಅಭ್ಯರ್ಥಿ ಆಯ್ಕೆ ಸಂಬಂಧ ಸಭೆ ನಡೆಸಿದರು. ಸಂಸದ ಬಸವರಾಜ ಬೊಮ್ಮಾಯಿ, ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಚರ್ಚಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಬುಧವಾರ ರಾತ್ರಿ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಜತೆ ಸಮಾಲೋಚನೆ ನಡೆಸಿ, ಗೆಲ್ಲುವ ಅಭ್ಯರ್ಥಿಗಳನ್ನೇ ಕಣಕ್ಕೆ ಇಳಿಸಬೇಕು ಎಂದು ತಾಕೀತು ಮಾಡಿದ್ದಾರೆ. ಈ ಎಲ್ಲ ಬೆಳವಣಿಗೆಗಳ ಬೆನ್ನಲ್ಲೇ ಹೊಸ ಹೊಸ ಆಕಾಂಕ್ಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ತಮಗೇ ಟಿಕೆಟ್ ಬೇಕೆಂದು ಪಟ್ಟು ಹಿಡಿಯುತ್ತಿದ್ದಾರೆ.