ಶುಕ್ರವಾರ, 4 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪ್ರತಿಭಟನೆ ವ್ಯಕ್ತಿಯ ಹಕ್ಕು: ಹೈಕೋರ್ಟ್‌

Published : 5 ಜುಲೈ 2024, 23:20 IST
Last Updated : 5 ಜುಲೈ 2024, 23:20 IST
ಫಾಲೋ ಮಾಡಿ
Comments

ಬೆಂಗಳೂರು: ‘ಪ್ರತಿಭಟನೆ ನಡೆಸುವುದು ಪ್ರಜಾಪ್ರಭುತ್ವದಲ್ಲಿ  ವ್ಯಕ್ತಿಯೊಬ್ಬನ ಬಹುಮುಖ್ಯವಾದ ಹಕ್ಕು. ಪ್ರತಿಭಟನೆಗಳಲ್ಲಿ ಸಾರ್ವಜನಿಕ ಆಸ್ತಿಗಳಿಗೆ ಸಣ್ಣ-ಪುಟ್ಟ ಹಾನಿ ಸಂಭವಿಸುವುದು ಸಹಜ. ಪ್ರತಿಭಟನೆಗಳು ಪ್ರಯೋಗ ಶಾಲೆಯಲ್ಲಿ ನಡೆಯುವುದಿಲ್ಲ’ ಎಂದು ಹೈಕೋರ್ಟ್ ಮೌಖಿಕ ಅಭಿಪ್ರಾಯ ವ್ಯಕ್ತಪಡಿಸಿದೆ.

‘ನಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸಬೇಕು’ ಎಂದು ಕೋರಿ ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ಸಲ್ಲಿಸಿದ್ದ ಅರ್ಜಿಯನ್ನು, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರು ಶುಕ್ರವಾರ ವಿಚಾರಣೆ ನಡೆಸಿದರು.

ವಿಚಾರಣೆ ವೇಳೆ ಅರ್ಜಿದಾರರ ಪರ ಹಿರಿಯ ವಕೀಲ ಎಂ.ಅರುಣ್ ಶ್ಯಾಮ್‌, ‘ಅರ್ಜಿದಾರರು ಕಾನೂನು ಪರಿಪಾಲಿಸುವ ನಾಗರಿಕರಾಗಿದ್ದಾರೆ. ಅನುಮತಿ ಪಡೆದೇ ಪ್ರತಿಭಟನೆ ನಡೆಸಿದ್ದಾರೆ. ಆದರೆ, ರಾಜಕೀಯ ಪ್ರೇರಿತವಾಗಿ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿ ದೂರು ದಾಖಲಿಸಲಾಗಿದ್ದು, ಪ್ರಕರಣವನ್ನು ರದ್ದುಪಡಿಸಬೇಕು’ ಎಂದು ಕೋರಿದರು.

ಇದನ್ನು ಆಕ್ಷೇಪಿಸಿದ ರಾಜ್ಯ ಪ್ರಾಸಿಕ್ಯೂಟರ್–1 ಬಿ.ಎ.ಬೆಳ್ಳಿಯಪ್ಪ, ‘ಪ್ರತಿಭಟನೆಯನ್ನು ಶಾಂತಿಯಿಂದ ನಡೆಸಬೇಕು. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರು ಪ್ರತಿಭಟನೆ ನಡೆಸುವ ನೆಪದಲ್ಲಿ ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ. ಎರಡು ಗಂಟೆಗಳಿಗೂ ಹೆಚ್ಚು ಕಾಲ ರಸ್ತೆಯಲ್ಲಿನ ಸುಗಮ ಸಂಚಾರಕ್ಕೆ ಅಡಚಣೆ ಉಂಟುಮಾಡಿದ್ದಾರೆ. ಇದರಿಂದ ಶ್ರೀಸಾಮಾನ್ಯರಿಗೆ ತೊಂದರೆಯಾಗಿದೆ. ಆದ್ದರಿಂದ, ಪ್ರಕರಣ ರದ್ದುಪಡಿಸಬಾರದು’ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ‘ಅರ್ಜಿದಾರರು ಪೆಟ್ರೋಲ್-ಡೀಸೆಲ್‌ ಬೆಲೆ ಏರಿಕೆ ವಿಚಾರವಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಸಾರ್ವಜನಿಕ ಸ್ಥಳದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಪ್ರತ್ರಿಭಟನೆ ಪ್ರಜಾಪ್ರಭ್ವತದ ಬಹುಮುಖ್ಯವಾದ ಹಕ್ಕು. ಈ ಪ್ರಕರಣದಲ್ಲಿ ರಸ್ತೆಗೆ ಅಲ್ಪ ಪ್ರಮಾಣದಲ್ಲಿ ಹಾನಿ ಉಂಟಾಗಿದೆ. ಪ್ರತಿಭಟನೆಯನ್ನೇ ಮಾಡಬಾರದೆ? ಹೀಗಾದರೆ ಹೇಗೆ? ಅರ್ಜಿದಾರರು ಪ್ರತಿಭಟನೆಗೆ ಪೂರ್ವಾನುಮತಿ ಕೇಳಿದ್ದಾರಲ್ಲವೇ’ ಎಂದು ಪ್ರಶ್ನಿಸಿತು.

ಇದನ್ನು ಅಲ್ಲಗಳೆದ ಬೆಳ್ಳಿಯಪ್ಪ ಅವರು, ‘ಅರ್ಜಿದಾರರು  ಸ್ಥಳೀಯ ಶಾಸಕರು, ಮುಖ್ಯಮಂತ್ರಿ ಪ್ರತಿಕೃತಿ ದಹನ ಮಾಡಿ ರಸ್ತೆಗೆ ಹಾನಿ ಉಂಟು ಮಾಡಿದ್ದಾರೆ.  ₹1ನಷ್ಟು ಹಾನಿಯಾದರೂ ಅಷ್ಟೇ, ₹50 ಸಾವಿರದಷ್ಟು ಹಾನಿಯಾದರೂ ಅಷ್ಟೇ, ಅದು ಸಾರ್ವಜನಿಕ ಆಸ್ತಿ. ಹಾಗಾಗಿ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು‘ ಎಂದು ಕೋರಿದರು.

ಇದನ್ನು ಒಪ್ಪದ ನ್ಯಾಯಪೀಠ, ‘ಮಹಜರು ವರದಿಯಲ್ಲಿ ಸಾರ್ವಜನಿಕ ಆಸ್ತಿಯ ಹಾನಿಯ ಕುರಿತಂತೆ ಉಲ್ಲೇಖವಿಲ್ಲ. ಈ ರೀತಿಯ ಸಣ್ಣ- ಪುಟ್ಟ ವಿಷಯಗಳಲ್ಲಿ ನ್ಯಾಯಾಲಯ ಮಧ್ಯ ಪ್ರವೇಶ ಮಾಡಲಾಗುವುದಿಲ್ಲ’ ಎಂದು ಹೇಳಿತು. ಅಂತೆಯೇ, ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದ ಮುಂದಿನ ಎಲ್ಲ ನ್ಯಾಯಿಕ ಪ್ರಕ್ರಿಯೆ ಹಾಗೂ ತನಿಖೆಗೆ ಮಧ್ಯಂತರ ತಡೆ ನೀಡಿ ಆದೇಶಿಸಿತು.

ಪ್ರಕರಣವೇನು?

ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಹಿನ್ನೆಲೆಯಲ್ಲಿ 2024ರ ಜೂನ್‌ 20ರಂದು ಬಿಜೆಪಿಯ ವಿರಾಜಪೇಟೆ ಮಂಡಲದ ಅಧ್ಯಕ್ಷ ಸುವಿನ್ ಗಣಪತಿ ನೇತೃತ್ವದಲ್ಲಿ ಕಾರ್ಯಕರ್ತರು, ಮುಖಂಡರು ಪ್ರತಿಭಟನೆ ನಡೆಸಿದ್ದರು. ‘ಈ ಪ್ರತಿಭಟನೆಯಿಂದ ಸಾರ್ವಜನಿಕರ ಸುಗಮ ಸಂಚಾರಕ್ಕೆ ತಡೆ ಉಂಟಾಗಿದೆ. ಪ್ರತಿಭಟನಕಾರರು ಸಾರ್ವಜನಿಕ ಆಸ್ತಿಗೆ ಹಾನಿ ಉಂಟು ಮಾಡಿದ್ದಾರೆ’ ಎಂದು ಆರೋಪಿಸಿ ವಿರಾಜಪೇಟೆ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT