‘ಅಕ್ರಮ ರೆಸಾರ್ಟ್, ಹೋಂ ಸ್ಟೇ ತೆರವು’
‘ಅರಣ್ಯ ಪ್ರದೇಶ ಒತ್ತುವರಿ ಮಾಡಿ ನಿರ್ಮಿಸಿರುವ ಅಕ್ರಮ ರೆಸಾರ್ಟ್, ಹೋಂ ಸ್ಟೇಗಳನ್ನು ತಕ್ಷಣವೇ ತೆರವು ಮಾಡಿ. ನಂತರದ ಹಂತದಲ್ಲಿ ತೋಟ ಮತ್ತು ಕಟ್ಟಡಗಳನ್ನು ತೆರವು ಮಾಡಿ ಎಂದು ಕಾರ್ಯಪಡೆಗೆ ಸೂಚಿಸಲಾಗಿದೆ. ಯಾವ ಒತ್ತುವರಿಯನ್ನೂ ತೆರವು ಮಾಡದೇ ಇರುವುದಿಲ್ಲ’ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದರು. ‘ಪಶ್ಚಿಮಘಟ್ಟ ಪ್ರದೇಶವವನ್ನು ಒತ್ತುವರಿ ಮಾಡಿ ವಾಣಿಜ್ಯ ಚಟುವಟಿಕೆ ನಡೆಸುವುದರಿಂದ ಪರಿಸರಕ್ಕೆ ಹಾನಿಯಾಗಿದೆ. ವಯನಾಡ್ ಮತ್ತು ಉತ್ತರ ಕನ್ನಡದ ಶಿರೂರಿನಲ್ಲಿ ಘೋರ ದುರಂತ ಸಂಭವಿಸಿ, ಜೀವಹಾನಿ ಆಗಿದೆ. ಸಹಸ್ರಾರು ವರ್ಷಗಳ ಗುಡ್ಡವೇ ನಾಪತ್ತೆ ಆಗಿದೆ. ಈಗಲೂ ಎಚ್ಚೆತ್ತುಕೊಳ್ಳದಿದ್ದರೆ ಮುಂದಿನ ಪೀಳಿಗೆ ಕ್ಷಮಿಸುವುದಿಲ್ಲ’ ಎಂದರು. ಅವೈಜ್ಞಾನಿಕ ರಸ್ತೆ ಕಾಮಗಾರಿ ವಿರುದ್ಧವೂ ಕ್ರಮ: ‘ಪಶ್ಚಿಮ ಘಟ್ಟ ಪ್ರದೇಶದಲ್ಲಿ ರಸ್ತೆಗಳ ಮೇಲ್ದರ್ಜೆ, ವಿಸ್ತರಣೆ ಕಾಮಗಾರಿ ವೇಳೆ ಗುಡ್ಡಗಳನ್ನು ಅವೈಜ್ಞಾನಿಕವಾಗಿ ಲಂಬ ಕೋನದಲ್ಲಿ ಕತ್ತರಿಸಲಾಗಿದೆ. ಇಲ್ಲೆಲ್ಲಾ ಗುಡ್ಡ ಕುಸಿತಕ್ಕೆ ಇದೇ ಕಾರಣ. ಇಂತಹ ಕಾಮಗಾರಿ ನಡೆಸಿದ ಗುತ್ತಿಗೆದಾರರು ಮತ್ತು ಎಂಜಿನಿಯರ್‌ಗಳಿಗೆ ನೋಟಿಸ್ ನೀಡಿ ಕ್ರಮ ಜರುಗಿಸಲು ಸೂಚಿಸಲಾಗಿದೆ’ ಎಂದರು.