ಭಾನುವಾರ, 30 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಚಿವ ಜಮೀರ್‌ ಅಹ್ಮದ್‌ಗೆ ಹೈಕೋರ್ಟ್ ನೋಟಿಸ್‌

Published 26 ಜೂನ್ 2024, 23:32 IST
Last Updated 26 ಜೂನ್ 2024, 23:32 IST
ಅಕ್ಷರ ಗಾತ್ರ

ಬೆಂಗಳೂರು: ‘ಚಾಮರಾಜಪೇಟೆಯ ಛಲವಾದಿ ಪಾಳ್ಯದಲ್ಲಿರುವ ಪಶು ಚಿಕಿತ್ಸಾಲಯದ ಎರಡು ಎಕರೆ ಜಾಗವನ್ನು ಶೈಕ್ಷಣಿಕ ಉದ್ದೇಶಕ್ಕಾಗಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರಿಸಿದ ಸರ್ಕಾರದ ಆದೇಶ ರದ್ದುಪಡಿಸಬೇಕು’ ಎಂದು ಕೋರಿರುವ ಅರ್ಜಿಗೆ ಸಂಬಂಧಿಸಿದಂತೆ ವಸತಿ, ವಕ್ಫ್‌ ಮತ್ತು ಅಲ್ಪಸಂಖ್ಯಾತರ ಇಲಾಖೆ ಸಚಿವ ಬಿ.ಝಡ್.ಜಮೀರ್ ಅಹ್ಮದ್ ಖಾನ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್‌ ಆದೇಶಿಸಿದೆ.

ಸರ್ಕಾರದ ಆದೇಶ ರದ್ದುಪಡಿಸುವಂತೆ ಕೋರಿ ಹೈಕೋರ್ಟ್ ವಕೀಲ ಗಿರೀಶ್ ಭಾರದ್ವಾಜ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ನೇತೃತ್ವದ ವಿಭಾಗೀಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ವಕೀಲ ವೆಂಕಟೇಶ ಪಿ.ದಳವಾಯಿ ಅವರ ವಾದ ಆಲಿಸಿದ ನ್ಯಾಯಪೀಠ ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಪಶುಸಂಗೋಪನಾ ಇಲಾಖೆ ಕಾರ್ಯದರ್ಶಿ ಹಾಗೂ ಸಚಿವ ಜಮೀರ್ ಅಹ್ಮದ್‌ ಖಾನ್‌ ಅವರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.  

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ‘ಚಾಮರಾಜಪೇಟೆ ನಾಗರಿಕರ ಒಕ್ಕೂಟ‘ ಸಲ್ಲಿಸಿರುವ ಮತ್ತೊಂದು ಪ್ರತ್ಯೇಕ ಅರ್ಜಿಯನ್ನೂ ಇದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ಜೊತೆ ವಿಚಾರಣೆಗೆ ಪರಿಗಣಿಸಬೇಕು ಎಂಬ ವಕೀಲ ವೆಂಕಟೇಶ ದಳವಾಯಿ ಅವರ ಮನವಿಯನ್ನು ಮಾನ್ಯ ಮಾಡಿದ ನ್ಯಾಯಪೀಠ ವಿಚಾರಣೆಯನ್ನು ಜುಲೈ 23ಕ್ಕೆ ಮುಂದೂಡಿತು.

ಬೆಂಗಳೂರು ನಗರ ಜಿಲ್ಲೆ ವ್ಯಾಪ್ತಿಯ ಐದು ತಾಲ್ಲೂಕುಗಳಲ್ಲಿನ 28 ಪಶುವೈದ್ಯ ಕೇಂದ್ರಗಳನ್ನು ಸ್ಥಳಾಂತರ ಮಾಡುವ ಸರ್ಕಾರದ ಕ್ರಮವನ್ನು ಪ್ರಶ್ನಿಸಿ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಕೂಡಾ ಪ್ರತ್ಯೇಕ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ‘ಅನಿಮಲ್ ರೈಟ್ಸ್‌ ಫಂಡ್ ಸಂಸ್ಥೆ’ಯೂ ಅರ್ಜಿ ದಾಖಲಿಸಿದೆ. ಈ ಎಲ್ಲಾ ಅರ್ಜಿಗಳನ್ನು ನ್ಯಾಯಪೀಠ ಒಟ್ಟಾಗಿಸಿ ವಿಚಾರಣೆ ನಡೆಸಲಿದೆ.

ಮನವಿ ಏನು?

‘ಮೈಸೂರು ಒಡೆಯರ್‌ ಕಾಲದಲ್ಲಿ ಈಗ್ಗೆ 200 ವರ್ಷಗಳ ಹಿಂದೆ ಚಾಮರಾಜಪೇಟೆಯನ್ನು ಅಭಿವೃದ್ಧಿಪಡಿಸಲಾಯಿತು. ಆಗ 1860ರಲ್ಲಿ ಎಂ.ಮುತ್ತೋಜಿ ರಾವ್ ಶಿಂಧೆ ಎಂಬುವರು ಪಶು ವೈದ್ಯಕೀಯ ಮತ್ತು ಚಿಕಿತ್ಸಾಲಯ ನಿರ್ಮಾಣಕ್ಕಾಗಿ ಈ ಜಾಗವನ್ನು ದಾನವಾಗಿ ನೀಡಿದ್ದರು. ಇಂತಹ ಜಾಗವು ಅನೂಚಾನವಾಗಿ ಪಶು ಸಂಗೋಪನೆ ಇಲಾಖೆಯ ಸುಪರ್ದಿಯಲ್ಲಿತ್ತು. ಈಗ ಈ ಜಾಗವನ್ನು ಚಾಮರಾಜಪೇಟೆಯ ಶಾಸಕರೂ ಆಗಿರುವ ಸಚಿವ ಜಮೀರ್ ಅಹ್ಮದ್ ಖಾನ್ ತಮ್ಮ ಪ್ರಭಾವ ಬಳಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಸ್ತಾಂತರ ಆಗುವಂತೆ ಮಾಡಿದ್ದಾರೆ. ಈ ಜಾಗದಲ್ಲಿ ಮೌಲಾನಾ ಆಜಾದ್ ಮಾದರಿ ಶಾಲೆ, ಮೊರಾರ್ಜಿ ದೇಸಾಯಿ ವಸತಿ ಶಾಲೆ, ಹಾಸ್ಟೆಲ್ ನಿರ್ಮಾಣ ಮಾಡುವ ಉದ್ದೇಶ ಹೊಂದಲಾಗಿದೆ. ಇಲ್ಲಿನ ಆಸ್ಪತ್ರೆ ಹಾಗೂ ಸಿಬ್ಬಂದಿಯನ್ನು ಜಯನಗರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಸರ್ಕಾರದ ಈ ಆದೇಶ ರದ್ದುಪಡಿಸಬೇಕು’ ಎಂಬುದು ಅರ್ಜಿದಾರರ ಮನವಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT