ಕಾಂಗ್ರೆಸ್ ಪಕ್ಷದ ಡಿಎನ್ಎಯಲ್ಲೇ ಭ್ರಷ್ಟಾಚಾರ ಇದೆ. ಸಿದ್ದರಾಮಯ್ಯ ಅವರು ಇದಕ್ಕೆ ಹೊರತಾಗಿಲ್ಲ. ನಿಯಮಗಳನ್ನು ಗಾಳಿಗೆ ತೂರಿ ಅವರು ಅಧಿಕಾರ ದುರುಪಯೋಗ ಮಾಡಿದ್ದಾರೆ. ಇಡೀ ದೇಶಕ್ಕೆ ರಾಹುಲ್ ಗಾಂಧಿ ಅವರು ನೈತಿಕತೆಯ ನಕಲಿ ಪಾಠ ಹೇಳುತ್ತಾರೆ. ನೈತಿಕತೆ ಕಳೆದುಕೊಂಡಿರುವ ಸಿದ್ದರಾಮಯ್ಯ ರಾಜೀನಾಮೆ ನೀಡುವಂತೆ ರಾಹುಲ್ ಸೂಚಿಸಬೇಕು–ಪ್ರಲ್ಹಾದ ಜೋಶಿ, ಕೇಂದ್ರ ಆಹಾರ ಸಚಿವ
ತಮ್ಮ ಜೀವನ ತೆರೆದ ಪುಸ್ತಕ ಎಂದು ಸಿದ್ದರಾಮಯ್ಯ ಪದೇ ಪದೇ ಹೇಳಿಕೆ ನೀಡಿದ್ದಾರೆ. ಆ ಪುಸ್ತಕ ಈಗ ಎಲ್ಲಿ ಕಳೆದು ಹೋಗಿದೆ ಎಂಬುದು ಗೊತ್ತಿಲ್ಲ. ಹೈಕೋರ್ಟ್ ಆದೇಶ ಗೌರವಿಸಿ ಹಾಗೂ ಪ್ರಕರಣದ ಗಾಂಭೀರ್ಯ ಗಮನಿಸಿ ಅವರು ಕೂಡಲೇ ರಾಜೀನಾಮೆ ನೀಡಬೇಕು. ತಪ್ಪು ಮಾಡುವುದು ಸಹಜ. ಅದನ್ನು ತಿದ್ದಿಕೊಳ್ಳಬೇಕು.–ವಿ.ಸೋಮಣ್ಣ, ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ರಾಜ್ಯ ಸಚಿವ
ದಲಿತರ ಜಮೀನನ್ನು ಪಡೆದು ಸಿದ್ದರಾಮಯ್ಯ ತಪ್ಪು ಮಾಡಿದ್ದಾರೆ. ಜತೆಗೆ, ಸಾಂವಿಧಾನಿಕ ಹುದ್ದೆಯಲ್ಲಿದ್ದು ಪತ್ನಿ ಹೆಸರಿನಲ್ಲಿ 14 ನಿವೇಶನಗಳನ್ನು ಪಡೆದಿದ್ದಾರೆ. ರಾಜ್ಯಪಾಲರ ವಿರುದ್ಧ ರಾಜಕೀಯ ಪ್ರೇರಿತ ದುರುದ್ದೇಶದ ಆರೋಪ ಮಾಡಿರುವ ಅವರು ಹುದ್ದೆಯಲ್ಲಿ ಯಾವುದೇ ಕಾರಣಕ್ಕೂ ಮುಂದುವರಿಯಬಾರದು.–ಶೋಭಾ ಕರಂದ್ಲಾಜೆ, ಕೇಂದ್ರ ಕಾರ್ಮಿಕ ಖಾತೆ ರಾಜ್ಯ ಸಚಿವೆ
ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ತಂದೆ ಬಿ.ಎಸ್.ಯಡಿಯೂರಪ್ಪ ಅವರು ಪೋಕ್ಸೊ ಪ್ರಕರಣದ ಆರೋಪಿ. ಸಿದ್ದರಾಮಯ್ಯ ರಾಜೀನಾಮೆ ಕೇಳಲು ವಿಜಯೇಂದ್ರ ಅವರಿಗೆ ನೈತಿಕತೆ ಇಲ್ಲ. ಮೊದಲು ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಲಿ.–ಪ್ರಿಯಾಂಕ್ ಖರ್ಗೆ, ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಸಚಿವ
ಪಕ್ಷ ಅಥವಾ ಸರ್ಕಾರ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ದೆಹಲಿಯಿಂದ ಹಳ್ಳಿಯವರೆಗೂ ಕಾಂಗ್ರೆಸ್, ಸಿದ್ದರಾಮಯ್ಯ ಅವರಿಗೆ ಬೆಂಬಲ ನೀಡಲಿದೆ. ಕಾನೂನು ಹೋರಾಟ ಮಾಡುತ್ತೇವೆ–ಡಿ.ಕೆ. ಶಿವಕುಮಾರ್, ಕೆಪಿಸಿಸಿ ಅಧ್ಯಕ್ಷ
40 ವರ್ಷಗಳ ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲ ಎಂದು ಎದೆ ತಟ್ಟಿಕೊಂಡು ಹೇಳುತ್ತಿದ್ದ ಸಿದ್ದರಾಮಯ್ಯ ಅವರು ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ನೈತಿಕ ಹೊಣೆ ಹೊತ್ತು ತಕ್ಷಣವೇ ರಾಜೀನಾಮೆ ನೀಡಲಿ.–ಆರ್.ಅಶೋಕ ವಿಧಾನಸಭೆ ವಿರೋಧ ಪಕ್ಷದ ನಾಯಕ
ಸಿದ್ದರಾಮಯ್ಯ ರಾಜೀನಾಮೆ ಕೊಡಲಿ ಎಂದು ಒತ್ತಾಯ ಮಾಡುವುದಿಲ್ಲ. ಕಾನೂನಿನಲ್ಲಿ ರಕ್ಷಣೆ ಪಡೆಯಲು ಅವಕಾಶ ಇದೆ. ಕಾನೂನು ಬಾಹಿರ ಚಟುವಟಿಕೆ ಮಾಡಿದ್ದರೆ, ಕೋರ್ಟ್ ತೀರ್ಪು ಕೊಡುತ್ತದೆ–ಎಚ್.ಡಿ. ಕುಮಾರಸ್ವಾಮಿ, ಕೇಂದ್ರ ಸಚಿವ
ಮುಡಾ ಹಗರಣದಲ್ಲಿ ತಮ್ಮ ಪಾತ್ರ ಇಲ್ಲ ಎನ್ನುತ್ತಿದ್ದ ಸಿದ್ದರಾಮಯ್ಯ ಅವರು ರಾಜ್ಯಪಾಲರ ತೇಜೋವಧೆಯಲ್ಲಿ ನಿರತರಾಗಿದ್ದರು. ಹೈಕೋರ್ಟ್ ತೀರ್ಪಿನಲ್ಲಿ ಸತ್ಯ ಹೊರಬಂದಿದೆ. ರಾಜೀನಾಮೆಗೆ ಇನ್ನು ತಡವೇಕೆ?–ಬಿ.ವೈ.ವಿಜಯೇಂದ್ರ, ಅಧ್ಯಕ್ಷ, ರಾಜ್ಯ ಬಿಜೆಪಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.