ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಕಾಡು ಬೆಳೆಸಲು ವಿವಾದಿತ ಜಾಗ: ಎನ್‌ಜಿಟಿ ಚಾಟಿ

Published 18 ಜುಲೈ 2024, 19:55 IST
Last Updated 18 ಜುಲೈ 2024, 19:55 IST
ಅಕ್ಷರ ಗಾತ್ರ

ನವದೆಹಲಿ: ಬೆಳಗಾವಿ ಜಿಲ್ಲೆಯ ಗುತ್ತಿ ಬಸವಣ್ಣ ಏತ ನೀರಾವರಿ ಕುಡಿಯುವ ನೀರಿನ ಯೋಜನೆಗೆ ಬಳಕೆಯಾಗುವ ಅರಣ್ಯಕ್ಕೆ ಪರ್ಯಾಯವಾಗಿ ಪರಿಹಾರಾತ್ಮಕ ಅರಣ್ಯೀಕರಣ ಮಾಡಲು ಒತ್ತುವರಿಯಾಗಿರುವ 100 ಹೆಕ್ಟೇರ್‌ ಜಾಗ ಗುರುತಿಸಿ ಶಿಫಾರಸು ಮಾಡಿರುವುದು ‘ಅರಣ್ಯ ಸಂರಕ್ಷಣಾ ಕಾಯ್ದೆ 1980’ ಹಾಗೂ ‘ಪರಿಸರ ಸಂರಕ್ಷಣಾ ಕಾಯ್ದೆ 1986’ರ ಸ್ಪಷ್ಟ ಉಲ್ಲಂಘನೆ ಎಂದು ರಾಷ್ಟ್ರೀಯ ಹಸಿರು ನ್ಯಾಯಮಂಡಳಿ (ಎನ್‌ಜಿಟಿ) ಕಿಡಿ ಕಾರಿದೆ. 

ಮಾಧ್ಯಮ ವರದಿಗಳ ಆಧಾರದಲ್ಲಿ ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿರುವ ನ್ಯಾಯಮೂರ್ತಿ ಪ್ರಕಾಶ್ ಶ್ರೀವಾಸ್ತವ ನೇತೃತ್ವದ ಪ್ರಧಾನ ಪೀಠವು, ಕರ್ನಾಟಕ ಅರಣ್ಯ ಪಡೆ ಮುಖ್ಯಸ್ಥರು, ಕೇಂದ್ರ ಪರಿಸರ ಸಚಿವಾಲಯ ಹಾಗೂ ಮುಖ್ಯ ವನ್ಯಜೀವಿ ಸಂರಕ್ಷಕರಿಗೆ (ಪಿಸಿಸಿಎಫ್) ನೋಟಿಸ್‌ ನೀಡಿದೆ. ವಿವಾದಿತ ಜಾಗವನ್ನು ಶಿಫಾರಸು ಮಾಡಿರುವುದು ಗಂಭೀರ ಲೋಪ ಎಂದು ಕೇಂದ್ರ ಪರಿಸರ ಸಚಿವಾಲಯ ಸಹ ಅಸಮಾಧಾನ ವ್ಯಕ್ತಪಡಿಸಿತ್ತು. ಈ ಬಗ್ಗೆ ‘ಪ್ರಜಾವಾಣಿ’ ಜೂನ್‌ on controversial land to forestವರದಿ ಪ್ರಕಟಿಸಿತ್ತು. 

ಈ ಯೋಜನೆಯಡಿ ಮಾರ್ಕಾಂಡೇಯ ನದಿಗೆ ಅಣೆಕಟ್ಟೆ ನಿರ್ಮಿಸಿ ಕುಡಿಯುವ ನೀರಿನ ಬಳಕೆಗೆ 6 ಟಿಎಂಸಿ ಅಡಿ ನೀರು ಸಂಗ್ರಹಿಸಲಾಗುತ್ತದೆ. ಗೋಕಾಕ, ಹುಕ್ಕೇರಿ, ಬೈಲಹೊಂಗಲ ಪಟ್ಟಣ ಹಾಗೂ ಸುತ್ತಮುತ್ತಲ ಗ್ರಾಮಗಳಿಗೆ ಕುಡಿಯುವ ನೀರು ಪೂರೈಕೆಯ ಗುರಿ ಹೊಂದಲಾಗಿದೆ. ಈ ಯೋಜನೆಗೆ 575 ಹೆಕ್ಟೇರ್ ಅರಣ್ಯ ಬಳಸಿಕೊಳ್ಳಲಾಗುತ್ತದೆ. 

‘ಬೆಳಗಾವಿ ಜಿಲ್ಲೆಯ ಅಥಣಿ ವಲಯದ 462 ಹೆಕ್ಟೇರ್‌, ಗೋಕಾಕ್‌ ವಲಯದ 72 ಹೆಕ್ಟೇರ್ ಹಾಗೂ ಸವದತ್ತಿ ವಲಯದ 154 ಹೆಕ್ಟೇರ್ ಅನ್ನು ಪರಿಹಾರಾತ್ಮಕ ಅರಣ್ಯೀಕರಣಕ್ಕೆ ಗುರುತಿಸಲಾಗಿದೆ. ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಿ ಪ್ರಸ್ತಾವನೆ ಸಿದ್ಧಪಡಿಸಬೇಕು. ಈ ಜಾಗ ಒತ್ತುವರಿಯಾಗಿದೆಯೇ ಎಂಬುದನ್ನು ಪರಿಶೀಲನೆ ಮಾಡಬೇಕು. ಆದರೆ, ಈ ಪ್ರಕರಣದಲ್ಲಿ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸದೆಯೇ ಜಾಗ ಶಿಫಾರಸು ಮಾಡಿದಂತಿದೆ. ಅಧಿಕಾರಿಗಳ ಇಂತಹ ಧೋರಣೆಯನ್ನು ಸಹಿಸಲು ಸಾಧ್ಯವಿಲ್ಲ’ ಎಂದು ಎನ್‌ಜಿಟಿ ಹೇಳಿದೆ. 

ನೋಟಿಸ್‌ಗೆ ಪ್ರತಿಕ್ರಿಯೆ ನೀಡಲು ಅರಣ್ಯ ಇಲಾಖೆ ನಾಲ್ಕು ವಾರಗಳ ಕಾಲಾವಕಾಶ ಕೇಳಿದೆ. ಪ್ರಕರಣದ ವಿಚಾರಣೆಯನ್ನು ದಕ್ಷಿಣ ವಲಯ ಪೀಠಕ್ಕೆ ವರ್ಗಾಯಿಸಲಾಗಿದೆ. ಮುಂದಿನ ವಿಚಾರಣೆ ಸೆಪ್ಟೆಂಬರ್‌ 11ರಂದು ನಡೆಯಲಿದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT