ಭಾನುವಾರ, 7 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೋಕ್ಸೊ ಪ್ರಕರಣ: ಯಡಿಯೂರಪ್ಪಗೆ ಕೋರ್ಟ್‌ ಸಮನ್ಸ್‌

Published 4 ಜುಲೈ 2024, 15:56 IST
Last Updated 4 ಜುಲೈ 2024, 15:56 IST
ಅಕ್ಷರ ಗಾತ್ರ

ಬೆಂಗಳೂರು: ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದ ಪೋಕ್ಸೊ ಪ್ರಕರಣದ ಆರೋಪಿಯಾದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಇತರ ಮೂವರು ಆರೋಪಿಗಳಿಗೆ ನಗರದ ವಿಶೇಷ ನ್ಯಾಯಾಲಯ ಸಮನ್ಸ್ ಜಾರಿಗೊಳಿಸಿದೆ.

ಈ ಕುರಿತ ಅರ್ಜಿಯನ್ನು ನಗರದ 51ನೇ ಸಿವಿಲ್ ಮತ್ತು ಹೆಚ್ಚುವರಿ ಸೆಷನ್ಸ್ ಹಾಗೂ ಪೋಕ್ಸೊ ಪ್ರಕರಣಗಳ ವಿಚಾರಣೆ ನಡೆಸುವ ತ್ವರಿತಗತಿಯ ವಿಶೇಷ ನ್ಯಾಯಾಲಯ-1ರ ನ್ಯಾಯಾಧೀಶ ಎನ್.ಎಂ. ರಮೇಶ್ ಅವರು ಗುರುವಾರ ವಿಚಾರಣೆ ನಡೆಸಿ, ಸಮನ್ಸ್ ಜಾರಿಗೊಳಿಸಲು ಆದೇಶಿಸಿದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ಸಲ್ಲಿಸಿರುವ ದೋಷಾರೋಪಣೆ ಪಟ್ಟಿಯನ್ನು ಪರಿಗಣಿಸಿದ ನ್ಯಾಯಾಲಯ, ‌ಯಡಿಯೂರಪ್ಪ, ಅವರ ಸಹಚರರಾದ ವೈ.ಎಂ.ಅರುಣ್, ಎಂ.ರುದ್ರೇಶ್ ಮತ್ತು ವೈ. ಮರಿಸ್ವಾಮಿ ಅವರು ಇದೇ 15ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗುವಂತೆ ಆದೇಶಿಸಿದೆ.

‘ಯಡಿಯೂರಪ್ಪ ಅವರು ತಮ್ಮ ಧವಳಗಿರಿ ನಿವಾಸದಲ್ಲಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸಿದ್ದ ಸಿಐಡಿ ಕಳೆದ ವಾರವಷ್ಟೇ 750 ಪುಟಗಳಷ್ಟು ಸುದೀರ್ಘವಾದ ದೋಷಾರೋಪಣೆ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿತ್ತು.

ಯಡಿಯೂರಪ್ಪ ವಿರುದ್ಧ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ–2012ರ ಕಲಂ 8ರ ಅಡಿಯಲ್ಲಿ ಲೈಂಗಿಕ ದೌರ್ಜನ್ಯ, ಭಾರತೀಯ ದಂಡ ಸಂಹಿತೆ–1860ರ (ಐಪಿಸಿ) ಕಲಂ 354 (ಎ) ಅಡಿಯಲ್ಲಿ ಲೈಂಗಿಕ ಕಿರುಕುಳದ ಆರೋಪ ಹೊರಿಸಲಾಗಿದೆ. ಅವರ ಸಹಚರರಾದ ಇತರ ಮೂವರ ವಿರುದ್ಧ ಐಪಿಸಿ ಕಲಂ 204 ಮತ್ತು 214ರ ಅಡಿಯಲ್ಲಿ ಕ್ರಮವಾಗಿ ಸಾಕ್ಷ್ಯ ನಾಶಪಡಿಸಲು ಮತ್ತು ಆಮಿಷ ಒಡ್ಡಲು ಮುಂದಾದ ಅಪರಾಧಗಳಡಿ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣದ ಎಫ್‌ಐಆರ್‌ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಬೇಕು ಎಂಬ ಪ್ರಾಸಿಕ್ಯೂಷನ್‌ ಮನವಿಯನ್ನು ಕಳೆದ ವಾರವಷ್ಟೇ ಪರಿಗಣಿಸಿದ್ದ ಹೈಕೋರ್ಟ್‌ನ, ‘ಶಾಸಕರು–ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ನ್ಯಾಯಾಲಯದ ನ್ಯಾಯಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರು ಮುಂದಿನ ವಿಚಾರಣೆ ವರೆಗೆ ಯಡಿಯೂರಪ್ಪ ಅವರನ್ನು ಬಂಧಿಸದಂತೆ ನಿರ್ದೇಶಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT