ಶುಕ್ರವಾರ, 5 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಸಾಹಿತಿ ಕಮಲಾ ಹಂಪನಾ ನಿಧನ

Published 22 ಜೂನ್ 2024, 3:15 IST
Last Updated 22 ಜೂನ್ 2024, 3:15 IST
ಅಕ್ಷರ ಗಾತ್ರ

ಬೆಂಗಳೂರು: ಸಾಹಿತಿ ಕಮಲಾ ಹಂಪನಾ (89) ಅವರು ಹೃದಯಾಘಾತದಿಂದಾಗಿ ಶನಿವಾರ ಮುಂಜಾನೆ ನಿಧನರಾದರು.

ಅವರಿಗೆ ಸಾಹಿತಿ, ಸಂಶೋಧಕರಾಗಿರುವ ಪತಿ ಹಂ.ಪ. ನಾಗರಾಜಯ್ಯ, ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರ ಇದ್ದಾರೆ. ವಯೋಸಹಜ ಅನಾರೋಗ್ಯ ಸಮಸ್ಯೆ ಎದುರಿಸುತ್ತಿದ್ದ ಅವರು, ಕ್ರೆಸೆಂಟ್ ರಸ್ತೆಯಲ್ಲಿರುವ ಪುತ್ರಿಯ ನಿವಾಸದಲ್ಲಿ ಮೃತಪಟ್ಟಿದ್ದಾರೆ. ರಾತ್ರಿ ನಿದ್ದೆಯಲ್ಲಿರುವಾಗಲೇ ಅವರಿಗೆ ಹೃದಯಾಘಾತವಾಗಿದೆ. 

ರಾಜಾಜಿನಗರದಲ್ಲಿರುವ ಅವರ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಬೆಳಿಗ್ಗೆ ಇರಿಸಿ, ಬಳಿಕ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿರುವ ಸಂಸ ಬಯಲು ರಂಗಮಂದಿರದಲ್ಲಿ ಸಾರ್ವಜನಿಕ ದರ್ಶನಕ್ಕೆ ಇರಿಸಲಾಗಿತ್ತು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಾಹಿತ್ಯ, ರಂಗಭೂಮಿ, ರಾಜಕೀಯ ಸೇರಿ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ದರ್ಶನ ಪಡೆದರು.

ಕಮಲಾ ಅವರ ಸ್ವ ಇಚ್ಛೆಯಂತೆ ಅವರ ಕಣ್ಣು ಮತ್ತು ದೇಹವನ್ನು ರಾಮಯ್ಯ ವೈದ್ಯಕೀಯ ಕಾಲೇಜಿಗೆ ದಾನ ಮಾಡಲಾಯಿತು. 

1935ರ ಅ.28ರಂದು ಬೆಂಗಳೂರು ಜಿಲ್ಲೆಯ ದೇವನಹಳ್ಳಿಯಲ್ಲಿ ಜನಿಸಿದ ಅವರು, ಚಳ್ಳಕೆರೆ ಸೇರಿ ವಿವಿಧೆಡೆ ಪ್ರಾಥಮಿಕ ಶಿಕ್ಷಣ ಪಡೆದಿದ್ದರು. ತುಮಕೂರಿನಲ್ಲಿ ಪ್ರೌಢ ಶಿಕ್ಷಣ ಹಾಗೂ ಮೈಸೂರಿನಲ್ಲಿ ಕಾಲೇಜು ವ್ಯಾಸಂಗ ಮಾಡಿದರು. ಬಿ.ಎ. ಆನರ್ಸ್ ಪದವಿ ಪಡೆದ ಅವರು, 1958ರಲ್ಲಿ ಕನ್ನಡ ಅಧ್ಯಾಪಕಿಯಾಗಿ ವೃತ್ತಿ ಆರಂಭಿಸಿದ್ದರು. ಬೆಂಗಳೂರು ಮತ್ತು ಮೈಸೂರು ಮಹಾರಾಣಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರಾಗಿ, ಬೆಂಗಳೂರಿನ ವಿಜಯನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಕಾರ್ಯನಿರ್ವಹಿಸಿದ್ದರು. ಸರ್ಕಾರಿ ಸೇವೆಯಿಂದ ನಿವೃತ್ತರಾದ ಬಳಿಕ ಮೈಸೂರು ವಿಶ್ವವಿದ್ಯಾಲಯದ ಜೈನಶಾಸ್ತ್ರ ಮತ್ತು ಪ್ರಾಕೃತ ಅಧ್ಯಯನದ ಪ್ರಾಧ್ಯಾಪಕರು, ಅಧ್ಯಕ್ಷರು ಹಾಗೂ ಹಂಪಿ ಕನ್ನಡ ವಿಶ್ವವಿದ್ಯಾಲಯದ ಸಂದರ್ಶಕ ಪ್ರಾಧ್ಯಾಪಕರಾಗಿಯೂ ಕಾರ್ಯನಿರ್ವಹಿಸಿದ್ದರು. 

ಜೈನಧರ್ಮ ಹಳಗನ್ನಡ ಗ್ರಂಥ ಸಂಪಾದನೆ, ಜೀವನ ಚರಿತ್ರೆ, ಕಥೆ, ಕವನ, ವ್ಯಕ್ತಿ ಚಿತ್ರ ಸೇರಿ ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ಕೊಡುಗೆ ನೀಡಿರುವ ಅವರು, 48 ಕೃತಿಗಳನ್ನು ರಚಿಸಿದ್ದಾರೆ. ಸಾಹಿತ್ಯ ಕ್ಷೇತ್ರದ ಸಾಧನೆಗೆ ‘ರಾಜ್ಯೋತ್ಸವ ಪ್ರಶಸ್ತಿ’, ‘ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ‘ಬಾಬಾ ಆಮ್ಟೆ ರಾಷ್ಟ್ರೀಯ ಪ್ರಶಸ್ತಿ’, ‘ದಾನಚಿಂತಾಮಣಿ ಅತ್ತಿಮಬ್ಬೆ ಪ್ರಶಸ್ತಿ’ ಸೇರಿ ಅನೇಕ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಮೂಡಬಿದರೆಯಲ್ಲಿ ನಡೆದ 71ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT