ಗುರುವಾರ, 19 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆದಾಯ ಮೀರಿದ ಆಸ್ತಿ ಗಳಿಕೆ ಆರೋಪ: ಡಿ.ಕೆ. ಶಿವಕುಮಾರ್‌ಗೆ ‘ಸು‍ಪ್ರೀಂ’ ನೋಟಿಸ್‌

Published : 17 ಸೆಪ್ಟೆಂಬರ್ 2024, 16:26 IST
Last Updated : 17 ಸೆಪ್ಟೆಂಬರ್ 2024, 16:26 IST
ಫಾಲೋ ಮಾಡಿ
Comments

ನವದೆಹಲಿ: ಆದಾಯ ಮೀರಿದ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌, ಕರ್ನಾಟಕ ಸರ್ಕಾರ ಹಾಗೂ ಲೋಕಾಯುಕ್ತರಿಗೆ ಸುಪ್ರೀಂ ಕೋರ್ಟ್‌ ಮಂಗಳವಾರ ನೋಟಿಸ್‌ ಜಾರಿ ಮಾಡಿದೆ. 

ಈ ಆರೋಪಕ್ಕೆ ಸಂಬಂಧಿಸಿದಂತೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂಪಡೆದಿದ್ದ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಸೂರ್ಯಕಾಂತ್‌ ಹಾಗೂ ಉಜ್ಜಲ್‌ ಭುಯಾನ್ ಅವರನ್ನೊಳಗೊಂಡ ಪೀಠವು ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಿತು. ವಿಚಾರಣೆಯನ್ನು ನಾಲ್ಕು ವಾರ ಮುಂದೂಡಿತು. 

ಆರಂಭದಲ್ಲಿ ಪೀಠವು, ‘ಇದು ರಾಜ್ಯ ಹಾಗೂ ಸಿಬಿಐ ನಡುವಿನ ವಿಷಯವಾಗಿರುವುದರಿಂದ ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಲು ಹೇಗೆ ಅವಕಾಶ ಇದೆ’ ಎಂದು ಪ್ರಶ್ನಿಸಿತು. 

ಶಿವಕುಮಾರ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ, ‘ಇದು ರಾಜ್ಯ ಹಾಗೂ ಸಿಬಿಐ ನಡುವಿನ ಪ್ರಕರಣ. ಇದರಲ್ಲಿ ಪ್ರತಿವಾದಿಯಾಗಿರುವುದು ಸಿಬಿಐ. ಹೈಕೋರ್ಟ್ ಆದೇಶ ಸರಿಯಾಗಿದೆ’ ಎಂದರು. 

‘ನೀವು ಹೇಳಿದ್ದು ಸರಿ ಇರಬಹುದು. ಸಿಬಿಐ ಮಾತ್ರ ಪ್ರತಿವಾದಿಯೆಂದು ಹೈಕೋರ್ಟ್‌ ಹೇಳಬಹುದಿತ್ತು’ ಎಂದು ಪೀಠ ಹೇಳಿತು. 

ಯತ್ನಾಳ ಪರ ಹಿರಿಯ ವಕೀಲ ಸಿದ್ಧಾರ್ಥ ದವೆ ವಾದ ಮಂಡಿಸಿದರು.

ಯತ್ನಾಳ ಹಾಗೂ ಸಿಬಿಐ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ಇತ್ತೀಚೆಗೆ ವಜಾಗೊಳಿಸಿತ್ತು. ‘ಕೇಂದ್ರ ಸರ್ಕಾರವು ಎಲ್ಲಿಯವರೆಗೆ ರಾಜ್ಯವೊಂದರಲ್ಲಿ ಸಿಬಿಐ ಅನ್ನು ಕಾರ್ಯನಿರ್ವಹಣೆಗೆ ಹಚ್ಚಬಹುದು ಎಂಬುದು ಕಾನೂನಿನ ವಿಚಾರಕ್ಕೆ ಒಳಪಟ್ಟಿದೆ. ಈ ಪ್ರಕರಣದಲ್ಲಿನ ಕಾನೂನಿನ ವಿಚಾರಗಳು ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವ್ಯಾಪ್ತಿಗೆ ಸಂಬಂಧಿಸಿವೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರ ಮತ್ತು ಸಿಬಿಐ ನಡುವೆ ಸಂಘರ್ಷ ಇದ್ದು ಪ್ರಕರಣವನ್ನು ಸಂವಿಧಾನದ 131ನೇ ವಿಧಿಯಡಿ ಸುಪ್ರೀಂ ಕೋರ್ಟ್ ನಿರ್ಧರಿಸುವುದೇ ಸೂಕ್ತ’ ಎಂಬ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಆದಾಯ ಮೀರಿ ಆಸ್ತಿ ಗಳಿಕೆ ಆರೋಪಕ್ಕೆ ಸಂಬಂಧಿಸಿದಂತೆ ಈ ಹಿಂದಿನ ಬಿಜೆಪಿ ಸರ್ಕಾರವು ಡಿ.ಕೆ.ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ 2019ರ ಸೆಪ್ಟೆಂಬರ್ 25ರಂದು ಅನುಮತಿ ನೀಡಿತ್ತು. ಈ ಅನುಮತಿಯನ್ನು ಈಗಿನ ಕಾಂಗ್ರೆಸ್‌ ಸರ್ಕಾರ 2023ರ ನವೆಂಬರ್ 23ರಂದು ಹಿಂಪಡೆದಿತ್ತು. ನಂತರ 2023ರ ಡಿಸೆಂಬರ್‌ 28ರಂದು ಲೋಕಾಯುಕ್ತ ತನಿಖೆಗೆ ವಹಿಸಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT