ಭಾನುವಾರ, 8 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ– ಸಿಎಂ ಸಿದ್ದರಾಮಯ್ಯ

Published 3 ಡಿಸೆಂಬರ್ 2023, 11:18 IST
Last Updated 3 ಡಿಸೆಂಬರ್ 2023, 11:18 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಜಾಪ್ರಭುತ್ವದಲ್ಲಿ ಸೋಲು-ಗೆಲುವುಗಳು ಸ್ವಾಭಾವಿಕ. ಪ್ರತಿಯೊಂದು ಚುನಾವಣಾ ಫಲಿತಾಂಶದಲ್ಲಿ ರಾಜಕೀಯ ಪಕ್ಷಗಳು ಕಲಿಯುವ ಪಾಠ ಇದೆ. ನಾವು ಸೋಲಿನಿಂದ ಕುಗ್ಗುವುದಿಲ್ಲ, ಗೆಲುವಿನಿಂದ ಹಿಗ್ಗುವುದಿಲ್ಲ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ನಾಲ್ಕು ರಾಜ್ಯಗಳ ಚುನಾವಣೆಗಳ ಫಲಿತಾಂಶದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ತೆಲಂಗಾಣದಲ್ಲಿ ಕಾಂಗ್ರೆಸ್ ಸ್ಪಷ್ಟ ಗೆಲುವು ಸಾಧಿಸಿದೆ. ನೆರೆಯ ರಾಜ್ಯವಾಗಿರುವ ಕಾರಣ ಅಲ್ಲಿನ ಗೆಲುವಿನಲ್ಲಿ ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳ ಯಶಸ್ಸು ಮತ್ತು ಕಾಂಗ್ರೆಸ್ ಪಕ್ಷದ ನಾಯಕರ ಶ್ರಮದ ದೊಡ್ಡ ಪಾತ್ರ ಇದೆ’ ಎಂದರು.

‘ವರ್ಷದ ಹಿಂದೆ ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ ಎನ್ನುವುದನ್ನು ಯಾರೂ ನಿರೀಕ್ಷಿಸಿರಲಿಲ್ಲ. ರಾಹುಲ್ ಗಾಂಧಿಯವರ ಭಾರತ್ ಜೋಡೊ ಕಾರ್ಯಕ್ರಮ ಅಲ್ಲಿನ ಪಕ್ಷದ ಕಾರ್ಯಕರ್ತರನ್ನು ಇನ್ನಷ್ಟು ಹುರಿದುಂಬಿಸಿದ್ದು ನಿಜ. ಅದರ ನಂತರ ಬಹಳ ವ್ಯವಸ್ಥಿತವಾದ ಪ್ರಚಾರ ನಡೆಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಗೆಲುವು ಮತ್ತು ನುಡಿದಂತೆ ನಡೆದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ತೆಲಂಗಾಣದ ಮತದಾರರು ಕಾಂಗ್ರೆಸ್ ಪಕ್ಷದ ಮೇಲೆ ಭರವಸೆ ಇಡುವಂತಾಯಿತು’ ಎಂದರು.

‘ಬಿಜೆಪಿ ಬಿಆರ್‌ಎಸ್‌ ಪಕ್ಷದ ಜೊತೆ ಒಳ ಒಪ್ಪಂದ ಮಾಡಿಕೊಂಡದ್ದು ಮತದಾರರು ಎರಡು ಪಕ್ಷಗಳ ಮೇಲೆ ಭರವಸೆ ಕಳೆದುಕೊಳ್ಳುವಂತೆ ಮಾಡಿತು. ಈ ಒಳ ಒಪ್ಪಂದದ ತಂತ್ರಗಾರಿಕೆಯನ್ನು ಕಾಂಗ್ರೆಸ್ ಪಕ್ಷ ಪ್ರಚಾರದ ಸಮಯದಲ್ಲಿ ಬಯಲು ಮಾಡಿದ್ದು‌ ಕೂಡಾ ನಮ್ಮ ಗೆಲುವಿಗೆ ಕಾರಣ’ ಎಂದು ಅವರು ವಿಶ್ಲೇಷಿಸಿದರು.

‘ಉಳಿದ ಮೂರು ರಾಜ್ಯಗಳಲ್ಲಿ ಬಿಜೆಪಿಯ ಗೆಲುವಿನಲ್ಲಿ ಹಣ ಮತ್ತು ಕೋಮುವಾದಿ ರಾಜಕಾರಣದ ಪಾತ್ರ ಕೂಡಾ ಇದೆ. ಈ ಮೂರೂ ರಾಜ್ಯಗಳಲ್ಲಿ ಬಿಜೆಪಿ ಅಕ್ರಮ ಗಳಿಕೆಯನ್ನು ನೀರಿನಂತೆ ಚೆಲ್ಲಿದೆ. ಅದರ ಜೊತೆ ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ತಮ್ಮ ಹಳೆಯ ಆಟವನ್ನು‌ ಮುಂದುವರಿಸಿದೆ’ ಎಂದರು.

‘ತೆಲಂಗಾಣದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವ ಸಾಧ್ಯತೆಯೇ ಇಲ್ಲದೆ ಇರುವ ಕಾರಣಕ್ಕೆ ಬಿಜೆಪಿ‌ ಅಲ್ಲಿ ಹೆಚ್ಚು ಹಣವನ್ನು ವ್ಯರ್ಥಮಾಡಲು ಹೋಗಿಲ್ಲ. ಅಲ್ಲಿ ಬಿಜೆಪಿ ಕೋಮುವಾದಿ ರಾಜಕಾರಣಕ್ಕೆ ಕೂಡಾ ಅವಕಾಶ ಇರಲಿಲ್ಲ. ರಾಜಸ್ಥಾನದಲ್ಲಿ ಸಾಮಾನ್ಯವಾಗಿ ಪ್ರತಿ ಚುನಾವಣೆಯಲ್ಲಿ ಪಕ್ಷವನ್ನು‌ ಬದಲಾಯಿಸುವ ಕಾರಣದಿಂದಾಗಿ ಅಶೋಕ್ ಗೆಹಲೋತ್‌ ಸರ್ಕಾರ ಒಳ್ಳೆಯ ಕೆಲಸ ಮಾಡಿದ್ದರೂ ಮರಳಿ ಅಧಿಕಾರಕ್ಕೆ ಬರಲು ಸಾಧ್ಯವಾಗಿಲ್ಲ’ ಎಂದರು.

‘ರಾಜಸ್ತಾನ ಮತ್ತು ಛತ್ತೀಸಗಢ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷದ ಹಿನ್ನಡೆಗೆ ಆಡಳಿತ ವಿರೋಧಿ ಅಲೆ ಕೂಡಾ ಕಾರಣ. ಇತ್ತೀಚಿನ ವರ್ಷಗಳಲ್ಲಿ ರಾಜಸ್ಥಾನದಲ್ಲಿ ಯಾವುದೇ ಆಡಳಿತ ಪಕ್ಷ ಮರಳಿ ಅಧಿಕಾರಕ್ಕೆ ಬಂದಿರುವ ಉದಾಹರಣೆ ಇಲ್ಲ. ಅಲ್ಲಿನ ಮತದಾರರು ಪ್ರತಿ ಚುನಾವಣೆಯಲ್ಲಿ ಆಡಳಿತ ಪಕ್ಷವನ್ನು ಸೋಲಿಸುತ್ತಾ ಬಂದಿದ್ದಾರೆ. ಈ ಚುನಾವಣೆಯಲ್ಲಿಯೂ ಆ ಪರಂಪರೆಯನ್ನು‌ ಮುಂದುವರಿಸಿದ್ದಾರೆ’ ಎಂದೂ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT